ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ 15 ಕಡೆಗಳಲ್ಲಿ ಪರಿಸರ ಸಂರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು.
‘ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ದೇಶದಲ್ಲಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲು 1974ರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಸ್ಥಾಪಿಸಿದರು. ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿಗೆ 50 ವರ್ಷ ಪೂರ್ಣಗೊಳ್ಳುತ್ತಿದ್ದು, ಇಂದಿರಾಗಾಂಧಿ ಅವರ ಜನ್ಮದಿನವಾದ ಅ.10ರಿಂದ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳು ಆರಂಭವಾಗಲಿವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದರು.
ಬಳ್ಳಾರಿಯಲ್ಲಿ ಅ.10ರಂದು ಸುವರ್ಣ ಮಹೋತ್ಸವದ ಕಾರ್ಯಕ್ರಮ ಆರಂಭವಾಗಿ, ಎಲ್ಲ ಜಿಲ್ಲೆಗಳಲ್ಲೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಎರಡು–ಮೂರು ಜಿಲ್ಲೆಗಳಿಗೆ ಅನ್ವಯಿಸುವಂತೆ 15 ಬೃಹತ್ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ನವೆಂಬರ್ 18 ಮತ್ತು 19ರಂದು ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಚರ್ಚೆ, ಸಂವಾದ, ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.
ಪ್ರಶಸ್ತಿ: ಪರಿಸರದ ಉಳಿವಿಗಾಗಿ ಕೆಲಸ ಮಾಡುತ್ತಿರುವ ವ್ಯಕ್ತಿ ಮತ್ತು ಸಂಘ–ಸಂಸ್ಥೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ, ಜಿಲ್ಲಾ ಮಟ್ಟದಲ್ಲಿ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ ನೀಡಲಾಗುವುದು. ಇದಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಮಟ್ಟದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಸಲಹೆಗಾರ: ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಮಂಡಳಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ನರೇಂದ್ರ ಸ್ವಾಮಿ ಹೇಳಿದರು.
‘ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಮಂಜೂರಾಗಿರುವ ಶೇ 60ರಷ್ಟು ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ಸರ್ಕಾರ ಅನುಮೋದನೆ ನೀಡಿದೆ. ಪಾರದರ್ಶಕವಾಗಿ ಶೀಘ್ರವೇ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನಂತರ ಮಂಡಳಿಯ ಕಾರ್ಯ ಚುರುಕುಗೊಳ್ಳುತ್ತದೆ’ ಎಂದರು.
ಚಿತ್ರಕಲೆ ರೀಲ್ಸ್‌ಗೆ ಬಹುಮಾನ
ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆಯ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ₹3 ಸಾವಿರ ಬಹುಮಾನ ನೀಡಲಾಗುತ್ತದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಅವರು ತಿಳಿಸಿದರು. ಪರಿಸರ ಸಂರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣದಲ್ಲಿ ಯುವಕರ ಪಾತ್ರ ಮಹತ್ವವಾದುದು ಎಂದು ಪರಿಗಣಿಸಿ ಅವರಿಗಾಗಿ ‘ಪರಿಸರದ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ’ ಎಂಬ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ. ಪರಿಸರ ಕಾಳಜಿ ಸಂರಕ್ಷಣೆಯ ಸಂದೇಶ ಸಾರುವ ಉತ್ತಮ ರೀಲ್ಸ್‌ಗಳನ್ನು ಪರಿಗಣಿಸಿ ಪ್ರಥಮ ಬಹುಮಾನವಾಗಿ ₹50 ಸಾವಿರ ದ್ವಿತೀಯ ಬಹುಮಾನವಾಗಿ ₹25 ಸಾವಿರ ಹಾಗೂ ತೃತೀಯ ಬಹುಮಾನವಾಗಿ ₹25 ಸಾವಿರ ನೀಡಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.