ADVERTISEMENT

ಕೈಗಾರಿಕಾ ಬಳಕೆಗೆ ಕಲುಷಿತ ನೀರು: ಸಿಎಂಗೆ ಖಂಡ್ರೆ ಪತ್ರ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 22:45 IST
Last Updated 12 ಸೆಪ್ಟೆಂಬರ್ 2024, 22:45 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೆಂಗಳೂರು: ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಕಲುಷಿತಗೊಂಡು ಬಳಕೆಯಾಗದೇ ಇರುವ ನೀರನ್ನು ಶುದ್ದೀಕರಿಸಿ ಕಟ್ಟಡ ನಿರ್ಮಾಣ, ಕೈಗಾರಿಕೆಗಳ ಬಳಕೆಗೆ ಪೂರೈಕೆ ಮಾಡುವ ಸಂಬಂಧ ಸಮಾಲೋಚನೆ ನಡೆಸಲು ಜಲಸಂಪನ್ಮೂಲ ಮತ್ತು ಸಣ್ಣ ನೀರಾವರಿ ಸಚಿವರ ಸಭೆ ಕರೆಯುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ತಿಪ್ಪಗೊಂಡನಹಳ್ಳಿ ಜಲಾಶಯ ಮತ್ತು ಬೆಂಗಳೂರಿನಲ್ಲಿ ಕಲುಷಿತಗೊಂಡಿರುವ ಕೆರೆಗಳ ಬಳಿ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಬೇಕು. ಈ ಘಟಕಗಳಲ್ಲಿ ನೀರು ಶುದ್ಧೀಕರಿಸಿ ಕಟ್ಟಡ ನಿರ್ಮಾಣ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಸೇರಿ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿರುವ ಕೈಗಾರಿಕಾ ಘಟಕಗಳಿಗೆ ಪೂರೈಕೆ ಮಾಡಬಹುದು. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ. ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದೂ ತಗ್ಗುತ್ತದೆ’ ಎಂದು ಪತ್ರದಲ್ಲಿ ಖಂಡ್ರೆ ಹೇಳಿದ್ದಾರೆ.

ಬೆಂಗಳೂರಿನ ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿ ಆಗುತ್ತಿರುವ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕಟ್ಟಡ ನಿರ್ಮಾಣಕ್ಕೆ ಮಾರಾಟ ಮಾಡುವ ಕುರಿತ ಪರಿಸರ ಇಲಾಖೆಯ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.  ಈ ಸಂಬಂಧ ನೀತಿಯೊಂದನ್ನು ರೂಪಿಸಲಾಗಿದೆ. ಈ ನಿರ್ಧಾರಕ್ಕೆ ಉಪಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಿಯಲ್‌ ಎಸ್ಟೇಟ್ ಸಂಸ್ಥೆಗಳ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.

ADVERTISEMENT

ಇದು ಕಾರ್ಯಗತಗೊಂಡಾಗ ತ್ಯಾಜ್ಯ ನೀರು ಕೆರೆ, ನದಿಗಳಿಗೆ ಸೇರುವುದು ತಪ್ಪುತ್ತದೆ. ನಗರದಲ್ಲಿ ಅಂತರ್ಜಲ ಮಟ್ಟವನ್ನು ಕಾಯ್ದುಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.