ADVERTISEMENT

ಗ್ರಾ.ಪಂ. ಚುನಾವಣೆ ಶೀಘ್ರ ನಿರ್ಧಾರ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 4 ಮೇ 2020, 14:11 IST
Last Updated 4 ಮೇ 2020, 14:11 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಚಿತ್ರದುರ್ಗ: ರಾಜ್ಯದ 6021 ಗ್ರಾಮ ಪಂಚಾಯಿತಿಗಳ ಅಧಿಕಾರವಧಿ ಇದೇ ಮೇ ಹಾಗೂ ಜೂನ್‌ಗೆ ಪೂರ್ಣಗೊಳ್ಳಲಿದ್ದು, ಆಡಳಿತಾಧಿಕಾರಿ ನೇಮಿಸುವ ವಿಚಾರವನ್ನು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸರ್ಕಾರದ ಎದುರು ಮೂರು ಆಯ್ಕೆಗಳಿವೆ. ಸದಸ್ಯರ ಅಧಿಕಾರವಧಿ ವಿಸ್ತರಿಸುವ, ಆಡಳಿತಾಧಿಕಾರಿ ನೇಮಕ ಮಾಡುವ ಹಾಗೂ ಚುನಾವಣೆ ನಡೆಸಿ ಹೊಸ ಸದಸ್ಯರಿಗೆ ಅಧಿಕಾರ ಹಸ್ತಾಂತರಿಸುವ ಅವಕಾಶವಿದೆ. ಸೂಕ್ತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸಲಿದೆ. ಸರ್ಕಾರದ ಕೋರಿಕೆ ಮೇರೆಗೆ ಚುನಾವಣಾ ಆಯೋಗ ಚುನಾವಣೆ ಮುಂದೂಡಿದೆ’ ಎಂದು ಹೇಳಿದರು.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ತೃಪ್ತಿಪಡಿಸಲು ಇಲ್ಲ–ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿದ್ದಾರೆ. ಕಣ್ಣು, ಹೃದಯ ಎಲ್ಲಿದೆ ಎಂಬುದೇ ಅವರಿಗೆ ಗೊತ್ತಾಗುತ್ತಿಲ್ಲ. ಕೊರೊನಾ ವಿಚಾರದಲ್ಲಿಯೂ ವಿನಾ ಕಾರಣ ರಾಜಕೀಯ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.

ADVERTISEMENT

‘ಮದ್ಯ ಮಾರಾಟ ನಿಷೇಧಕ್ಕೆ ಮಠಾಧೀಶರು ಮೊದಲಿನಿಂದಲೂ ಒತ್ತಾಯಿಸುತ್ತಿದ್ದಾರೆ. ಮದ್ಯ ಮಾರಾಟದ ಬಗ್ಗೆ ನಿರ್ಧಾರ ಪ್ರಕಟಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಆದರೆ, ದೇಶ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನೂ ನೋಡಬೇಕಾಗುತ್ತದೆ. ನೆರೆ ಹಾಗೂ ಕೊರೊನಾ ಕಾರಣಕ್ಕೆ ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.