ADVERTISEMENT

ಪರೀಕ್ಷೆ ಅಕ್ರಮ: ಕುಲಸಚಿವರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 19:01 IST
Last Updated 26 ಏಪ್ರಿಲ್ 2022, 19:01 IST

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ಮಲ್ಲೇಶ್ವರ ಠಾಣೆ ಪೊಲೀಸರು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಎಚ್‌.ನಾಗರಾಜ್‌ ಅವರನ್ನು ಮಂಗಳವಾರ ವಿಚಾರಣೆ ನಡೆಸಿದ್ದಾರೆ.

ನಾಗರಾಜ್‌ ಅವರು ಬಂಧಿತ ಆರೋಪಿ ಆರ್‌.ಸೌಮ್ಯಾ ಅವರಿಗೆ ಪಿಎಚ್‌.ಡಿ ಮಾರ್ಗದರ್ಶಕರಾಗಿದ್ದರು. ಮೈಸೂರು ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಅವರನ್ನು ಇತ್ತೀಚೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ನೇಮಕ ಮಾಡಲಾಗಿತ್ತು.

ಭೂಗೋಳಶಾಸ್ತ್ರ ವಿಷಯದಲ್ಲಿ ಪರಿಣತಿ ಹೊಂದಿದ್ದ ನಾಗರಾಜ್‌ ಅವರು ಪ್ರಶ್ನೆಪತ್ರಿಕೆ ತಯಾರಿಕಾ ತಂಡದಲ್ಲಿದ್ದರು ಎಂದು ಗೊತ್ತಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಅವರ ಪಾತ್ರ ಇರುವ ಶಂಕೆಯೂ ಇದೆ ಎಂದು ಮೂಲಗಳು ಹೇಳಿವೆ.

ADVERTISEMENT

ಮೈಸೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯಾ, ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ನಡೆದ ಪರೀಕ್ಷೆ ಬರೆದಿದ್ದರು. ಅವರ ಮೊಬೈಲ್‌ನ ವಾಟ್ಸ್‌ಆ್ಯಪ್‌ನಿಂದ 18 ಪ್ರಶ್ನೆಗಳು ಸೋರಿಕೆಯಾಗಿದ್ದವು. ಈ ಸಂಬಂಧ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಲ್ಲೇಶ್ವರ ಠಾಣೆಗೆ ಇದೇ 22ರಂದು ದೂರು ನೀಡಿದ್ದರು. ಅದನ್ನು ಆಧರಿಸಿ, ಸೌಮ್ಯಾ ಅವರನ್ನು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಕೋರ್ಟ್ ನ್ಯಾಯಾಂಗಬಂಧನಕ್ಕೆ ಒಪ್ಪಿಸಿತ್ತು.

‘ಸೌಮ್ಯಾ ಅವರನ್ನು ತನಿಖಾ ತಂಡದವರು ಮಂಗಳವಾರ ಸುಪರ್ದಿಗೆ ಪಡೆದು ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿದ್ದರು. ಅವರು ನೀಡಿದ ಮಾಹಿತಿ ಆಧಾರದಲ್ಲಿ ಪ್ರೊ.ನಾಗರಾಜ್‌ ಅವರನ್ನು ವಿಚಾರಣೆಗೆ ಕರೆಸಲಾಗಿದೆ’ ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಸೌಮ್ಯಾ ಅವರನ್ನು ಬಿಟ್ಟು ಮತ್ತ್ಯಾರನ್ನೂ ಬಂಧಿಸಲಾಗಿಲ್ಲ. ಅನುಮಾನ ವ್ಯಕ್ತವಾದವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.