ADVERTISEMENT

ತೀರ್ಥ ಕ್ಷೇತ್ರಗಳಲ್ಲಿ ಶಿವರಾತ್ರಿ ಪೂಜೆ: ಕೆಎಸ್‌ಆರ್‌ಟಿಸಿಯಿಂದ 300 ವಿಶೇಷ ಬಸ್

ಇಂದು, ನಾಳೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2020, 11:57 IST
Last Updated 20 ಫೆಬ್ರುವರಿ 2020, 11:57 IST
   

ಬೆಂಗಳೂರು: ಶಿವರಾತ್ರಿ ಅಂಗವಾಗಿರಾಜ್ಯದ ಪ್ರಸಿದ್ಧ ತೀರ್ಥ ಕ್ಷೇತ್ರಗಳಾದ ಧರ್ಮಸ್ಥಳ, ನಂಜನಗೂಡು, ಮುರುಡೇಶ್ವರ, ಹಂಪಿ ವಿರೂಪಾಕ್ಷ, ಗೋಕರ್ಣ ಮೊದಲಾದ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆಯಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ರಾಜ್ಯ ರಸ್ತೆಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ಶಿವರಾತ್ರಿ ಪ್ರಯುಕ್ತ 300 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ

ಇದೇ 20 ಮತ್ತು 21ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 23ರಂದು ಬೆಂಗಳೂರಿಗೆ ವಾಪಸ್ ಬರಲಿವೆ.

ಮೆಜೆಸ್ಟಿಕ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ADVERTISEMENT

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ತೆರಳಲಿವೆ. ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.

ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಬಸ್‌ಗಳು ಸಂಚರಿಸಲಿವೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾಲ್ಕುಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ 10 ರಿಯಾಯಿತಿ ಕೊಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.