ADVERTISEMENT

ನಕಲಿ ರಸಗೊಬ್ಬರ ಪೂರೈಸುತ್ತಿರುವ ಕಂಪನಿಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ಪಿಟಿಐ
Published 27 ಜುಲೈ 2025, 9:28 IST
Last Updated 27 ಜುಲೈ 2025, 9:28 IST
<div class="paragraphs"><p>ಬಿ.ವೈ. ವಿಜಯೇಂದ್ರ ಮತ್ತು ಸಿದ್ದರಾಮಯ್ಯ</p></div>

ಬಿ.ವೈ. ವಿಜಯೇಂದ್ರ ಮತ್ತು ಸಿದ್ದರಾಮಯ್ಯ

   

ಬೆಂಗಳೂರು: ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ರೈತರನ್ನು ವಂಚಿಸುವ ಜಾಲಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಜಾಗೃತ ದಳವನ್ನು ರಚಿಸಿ ಎಂದು ಸಲಹೆ ನೀಡಿದ್ದಾರೆ.

ADVERTISEMENT

‘ದಾಸ್ತಾನಿದ್ದರೂ ರಾಜ್ಯದ ವಿವಿಧ ಭಾಗಗಳಲ್ಲಿ ಯೂರಿಯಾದ ಕೃತಕ ಅಭಾವವನ್ನು ಸೃಷಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ಬೇಜವ್ದಾರಿತನವೂ ಕಾರಣವಾಗಿದೆ. ಇದು ರೈತರಲ್ಲಿ ಭಯ ಹುಟ್ಟಿಸಿದೆ. ಇದರ ವಿರುದ್ಧ ಬಿಜೆಪಿ ರೈತ ಘಟಕ ಸೋಮವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ’ ಎಂದು ಹೇಳಿದರು.

‘ಅನ್ನದಾತನನ್ನು ಸಂಕಷ್ಟಕ್ಕೀಡು ಮಾಡುವ ಹಾಗೂ ಶೋಷಣೆಗೊಳಪಡಿಸುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಲೇ ಇದೆ. ಈ ಬಾರಿ ಆಶಾದಾಯಕ ಮುಂಗಾರಿನ ಹಿನ್ನೆಲೆಯಲ್ಲಿ ಉತ್ತಮ ಬೆಳೆ ಬೆಳೆಯುವ ಉತ್ಸಾಹದಲ್ಲಿರುವ ರೈತ ಸಮುದಾಯವನ್ನು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಸುವ ಕಂಪನಿಗಳು ನಕಲಿ ಬೀಜಗಳನ್ನು ಪೂರೈಸುವ ಮೂಲಕ ಕೃಷಿ ಚಟುವಟಿಕೆಯನ್ನು ನಿಷ್ಕ್ರಿಯಗೊಳಿಸುವ ಕೃತ್ಯದಲ್ಲಿ ತೊಡಗಿರುವುದು ಅತ್ಯಂತ ಹೇಯ’ ಎಂದು ಅಸಮಾಧಾನ ಹೊರಹಾಕಿದ್ದಾರೆ.

ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.