ADVERTISEMENT

ಮುನಿರತ್ನ ವಿರುದ್ಧದ ಪ್ರಕರಣ: ಆರೋಪಪಟ್ಟಿ ಪರಿಶೀಲನೆಗೆ ಹೈಕೋರ್ಟ್ ಸೂಚನೆ

ಐಪಿಎಸ್‌ ಅಧಿಕಾರಿ ನೇಮಕಕ್ಕೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2020, 21:28 IST
Last Updated 11 ನವೆಂಬರ್ 2020, 21:28 IST
ಶಾಸಕ ಮುನಿರತ್ನ
ಶಾಸಕ ಮುನಿರತ್ನ   

ಬೆಂಗಳೂರು: 2018ರ ವಿಧಾನಸಭಾ ಚುನಾವಣೆ ಸಮಯದಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ನಕಲಿ ಗುರುತಿನ ಚೀಟಿ ಪತ್ತೆಯಾದ ಪ‍್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯ ಪರಿಶೀಲನೆಗೆ ಹಿರಿಯ ಐಪಿಎಸ್‌ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಪ್ರವೀಣ್‌ ಸೂದ್‌ ಅವರಿಗೆ ಹೈಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.

ಜಾಲಹಳ್ಳಿಯ ಎಸ್‌.ಎಲ್‌.ವಿ. ಪಾರ್ಕ್‌ ಅಪಾರ್ಟ್‌ಮೆಂಟ್‌ನಲ್ಲಿ ಮತದಾರರ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಮುನಿರತ್ನ ಮತ್ತು ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ನ. 3ರಂದು ನಡೆದ ಉಪ ಚುನಾವಣೆಯಲ್ಲಿ ಮುನಿರತ್ನ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಆಯ್ಕೆಯಾಗಿದ್ದಾರೆ.

2018ರಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಎನ್‌. ಆನಂದಕುಮಾರ್‌ ಮತ್ತು ಜಿ. ಸಂತೋಷ್‌ ಕುಮಾರ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ವಿಭಾಗೀಯ ಪೀಠ, ಈಗಾಗಲೇ ಸಲ್ಲಿಸಿರುವ ಆರೋಪಪಟ್ಟಿ ಮತ್ತು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಅಗತ್ಯವಿದೆಯೇ ಎಂಬುದನ್ನು ಪರಿಶೀಲಿಸಲು ಹಿರಿಯ ಐಪಿಎಸ್‌ ಅಧಿಕಾರಿಯನ್ನು ನಿಯೋಜಿಸುವಂತೆ ನಿರ್ದೇಶನ ನೀಡಿತು.

ADVERTISEMENT

‘ಡಿಜಿಪಿ ನೇಮಿಸುವ ಅಧಿಕಾರಿಯು ಈ ಪ್ರಕರಣದಲ್ಲಿ ಸರಿಯಾದ ರೀತಿಯಲ್ಲಿ ತನಿಖೆ ನಡೆದಿದೆಯೇ ಎಂಬುದನ್ನು ಪರಿಶೀಲನೆ ನಡೆಸಬೇಕು. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವವರ ಅಹವಾಲುಗಳನ್ನೂ ಆಲಿಸಬೇಕು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಅಗತ್ಯವಿದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸಬೇಕು. ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು’ ಎಂದು ವಿಭಾಗೀಯ ಪೀಠ ಆದೇಶಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಸ್‌. ಪೊನ್ನಣ್ಣ, ‘ಜಾಲಹಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಯಲ್ಲಿ ಪೊಲೀಸರು ಕೆಲವು ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನೇ ನಡೆಸಿಲ್ಲ. ಒಂದು ಬಾರಿ ಆರೋಪಪಟ್ಟಿ ಸಲ್ಲಿಸಿದ ಬಳಿಕವೂ ಹೆಚ್ಚಿನ ತನಿಖೆಗೆ ಆದೇಶಿಸಲು ಅವಕಾಶವಿದೆ. ಆದ್ದರಿಂದ ಮತದಾರರ ನಕಲಿ ಗುರುತಿನ ಚೀಟಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಆದೇಶ ಹೊರಡಿಸಬೇಕು’ ಎಂದು ಮನವಿ ಮಾಡಿದರು.

ಆದರೆ, ಈ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲು ತನಗೆ ಸಾಧ್ಯವಿಲ್ಲ ಎಂದು ಸಿಬಿಐ ಹೈಕೋರ್ಟ್‌ಗೆ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.