ADVERTISEMENT

ಕೃಷಿ ಕಾಯ್ದೆ ರದ್ದತಿಗೆ ಆಗ್ರಹ: ಫೆ. 14ಕ್ಕೆ ವಿಧಾನಸೌಧಕ್ಕೆ ರೈತ ಸಂಘ ಮುತ್ತಿಗೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2022, 8:31 IST
Last Updated 12 ಫೆಬ್ರುವರಿ 2022, 8:31 IST
   

ಹೊಸಪೇಟೆ (ವಿಜಯನಗರ): ‘ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಫೆ. 14ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್‌ ತಿಳಿಸಿದರು.

ಒಂದು ವರ್ಷಕ್ಕೂ ಹೆಚ್ಚಿನ ಕಾಲ ರೈತರು ಪ್ರತಿಭಟನೆ ನಡೆಸಿ, ಸತತ ಒತ್ತಡ ಹೇರಿದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಕಾಯ್ದೆ ರದ್ದುಗೊಳಿಸಲು ಹಿಂದೇಟು ಹಾಕುತ್ತಿದೆ. ಈ ಸಂಬಂಧ ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರ ಗಂಭೀರವಾಗಿಲ್ಲ. ಬಜೆಟ್‌ ಮಂಡನೆಯ ದಿನವೇ ಹೋರಾಟ ನಡೆಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೂರಾರು ರೈತರು ಪಾಲ್ಗೊಳ್ಳುವರು ಎಂದು ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿರುವ ಬಜೆಟ್‌ ಟಿಪ್ಪಣಿಯಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸುವ ವಿಚಾರ ಇಲ್ಲ ಎನ್ನುವುದು ಗೊತ್ತಾಗಿದೆ. ಸರ್ಕಾರ ಹಠಮಾರಿ ಧೋರಣೆ ಅನುಸರಿಸುತ್ತಿದೆ. 700 ಜನ ರೈತರ ಬಲಿದಾನದಿಂದ ಮೂರು ಕೃಷಿ ಕಾಯ್ದೆಗಳು ರದ್ದುಗೊಂಡಿವೆ. ಬಿ.ಎಸ್‌. ಯಡಿಯೂರಪ್ಪನವರು ಮುಖ್ಯಮಂತ್ರಿಯಿದ್ದಾಗ ತರಾತುರಿಯಲ್ಲಿ ಕಾಯ್ದೆ ಜಾರಿಗೆ ತಂದಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಯ್ದೆಗಳನ್ನು ರದ್ದುಗೊಳಿಸಲು ಕಾಳಜಿ ತೋರಿಸುತ್ತಿಲ್ಲ. ಇದು ಸರಿಯಾದ ಕ್ರಮವಲ್ಲ ಎಂದರು.

ADVERTISEMENT

ತುಂಗಭದ್ರಾ ಜಲಾಶಯದಿಂದ ಹೂಳು ತೆಗೆಸುವ ವಿಷಯ ನನೆಗುದಿಗೆ ಬಿದ್ದಿದೆ. ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು. ನದಿಗೆ ಹರಿದು ಹೋಗುವ ಹೆಚ್ಚುವರಿ ನೀರನ್ನು ಕೆರೆ, ಕಟ್ಟೆಗಳನ್ನು ತುಂಬಿಸಲು ಯೋಜನೆ ರೂಪಿಸಬೇಕು. ಸರ್ಕಾರ ಪ್ರತಿ ರೈತರಿಂದ 40 ಕ್ವಿಂಟಲ್‌ ಭತ್ತ ಖರೀದಿ ಮಾಡುತ್ತಿದೆ. ಆದರೆ, ಈ ಮಿತಿ ತೆಗೆದು ಹಾಕಬೇಕು. ಸಣ್ಣ ರೈತ ಕೂಡ ಕನಿಷ್ಠ 200ರಿಂದ 250 ಕ್ವಿಂಟಲ್‌ ಭತ್ತ ಬೆಳೆಯುತ್ತಾನೆ. 40 ಕ್ವಿಂಟಲ್‌ ಖರೀದಿಸಿದರೆ ಮಿಕ್ಕುಳಿದದ್ದನ್ನು ರೈತ ಯಾರಿಗೆ ಮಾರಾಟ ಮಾಡಬೇಕು ಎಂದು ಪ್ರಶ್ನಿಸಿದರು.

ರಸಗೊಬ್ಬರ ಬೆಲೆ ಹೆಚ್ಚಾಗಿರುವುದರಿಂದ ರೈತರ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ರೈತರ ಬೆಳೆಗಳ ಖರೀದಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಅದಕ್ಕಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕಾನೂನು ಜಾರಿಗೆ ತರಬೇಕು. ಹೊಸಪೇಟೆಯ ಐಎಸ್‌ಆರ್‌ ಸಕ್ಕರೆ ಕಾರ್ಖಾನೆ ಮುಚ್ಚಿ ಹಲವು ವರ್ಷಗಳಾಗಿವೆ. ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಹೊಸ ಕಾರ್ಖಾನೆ ಆರಂಭಿಸಬೇಕು ಎಂದು ಆಗ್ರಹಿಸಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ನಗರ ಘಟಕದ ಅಧ್ಯಕ್ಷ ಟಿ. ನಾಗರಾಜ, ತಾಯಪ್ಪ, ರಾಮಾಂಜಿನಿ, ಗಿಡ್ಡಯ್ಯ, ರಮೇಶ, ನವೀನ್‌, ಹೇಮರೆಡ್ಡಿ, ಸುರೇಶ, ಎಚ್‌.ಜಿ. ಮಲ್ಲಿಕಾರ್ಜುನ, ಕೊಟ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.