ADVERTISEMENT

ಕೆಆರ್‌ಎಸ್‌ ಜಲಾಶಯ ಮುತ್ತಿಗೆಗೆ ರೈತರ ನಿರ್ಧಾರ

ನೀರಿಗಾಗಿ ಮಂಡ್ಯದಲ್ಲಿ ತೀವ್ರಗೊಂಡ ಹೋರಾಟ

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 19:45 IST
Last Updated 27 ಜೂನ್ 2019, 19:45 IST
   

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಕೆಆರ್‌ಎಸ್‌ ಜಲಾಶಯಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ.

ಬೆಳೆದು ನಿಂತಿರುವ ಬೆಳೆಗಳಿಗೆ ಒಂದು ಕಟ್ಟು ನೀರು ಹರಿಸಬೇಕು ಎಂದು ರೈತರು ನಗರದ ಕಾವೇರಿ ನೀರಾವರಿ ನಿಗಮದ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

‘ರಾಜ್ಯ ಸರ್ಕಾರವೇ ನೀರು ಹರಿಸುವ ತೀರ್ಮಾನ ಕೈಗೊಳ್ಳಬೇಕು. ಲೋಕಸಭಾ ಚುನಾವಣೆ ವೇಳೆ ರಾಜ್ಯ ಸರ್ಕಾರ ನಾಲೆಗಳಿಗೆ ನೀರು ಹರಿಸಿತ್ತು, ಆಗ ಪ್ರಾಧಿಕಾರದ ಸೂಚನೆ ಇರಲಿಲ್ಲ. ಒಂದು ಕಟ್ಟು ನೀರು ಸಿಕ್ಕರೆ ಕೈಗೆ ಬಂದಿರುವ ತುತ್ತು ಬಾಯಿಗೆ ಬರುತ್ತದೆ. ಕೂಡಲೇ ನೀರು ಬಾರದಿದ್ದರೆ ಶುಕ್ರವಾರ ಜಲಾಶಯಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಹೋರಾಟದ ನೇತೃತ್ವ ವಹಿಸಿರುವ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

ADVERTISEMENT

ಪುಟ್ಟರಾಜು– ಮಾದೇಗೌಡ ಭೇಟಿ: ಧರಣಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷಡಾ.ಜಿ.ಮಾದೇಗೌಡ ಅವರನ್ನು ಗುರುವಾರ ಭೇಟಿ ಮಾಡಿ ಚರ್ಚೆ ನಡೆಸಿದರು. ಶುಕ್ರವಾರ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲೆಯ ರೈತರ ಸ್ಥಿತಿಯನ್ನು ಸಭೆಯ ಮುಂದಿಡಲು ಸಚಿವರು ಮಾದೇಗೌಡರ ಸಲಹೆ ಪಡೆದರು.

‘ಜಿಲ್ಲೆಯ ರೈತರ ಸ್ಥಿತಿ ಹಾಗೂ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆಯ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಗಮನ ಸೆಳೆಯಲಾಗುವುದು. ನೀರಿನ ಅವಶ್ಯಕತೆ ಕುರಿತು ಪ್ರಾಧಿಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ಸಿ.ಎಸ್‌.ಪುಟ್ಟರಾಜು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.