ADVERTISEMENT

ಜಿ.ಪಂ, ತಾ.ಪಂ ಚುನಾವಣೆ| ಬೆಂಗಳೂರಿನಲ್ಲಿ ಭಾನುವಾರ ಜೆಡಿಎಸ್‌ ಸಭೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 19:34 IST
Last Updated 12 ಫೆಬ್ರುವರಿ 2021, 19:34 IST
ಜೆಡಿಎಸ್‌ ನಾಯಕರು
ಜೆಡಿಎಸ್‌ ನಾಯಕರು    

ಬೆಂಗಳೂರು: ಪಕ್ಷ ಸಂಘಟನೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ತಯಾರಿ ಕುರಿತು ಚರ್ಚಿಸುವುದಕ್ಕಾಗಿ ಜೆಡಿಎಸ್‌ನ ವಿವಿಧ ಹಂತದ ಪ್ರಮುಖ ಮುಖಂಡರು, ಚುನಾಯಿತ ಪ್ರತಿನಿಧಿಗಳ ಸಭೆ ಫೆಬ್ರುವರಿ 14ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ, ಸಂಸದರು, ಶಾಸಕರು, ಮಾಜಿ ಸಚಿವರು, ಜಿಲ್ಲಾ ಘಟಕಗಳ ಅಧ್ಯಕ್ಷರು, ವಿವಿಧ ಹಂತದ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೆಡಿಎಸ್‌ ಬೆಂಬಲಿತ ಸದಸ್ಯರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.

‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷದ ಕಾರ್ಯಕರ್ತರನ್ನು ಸಭೆಯಲ್ಲಿ ಅಭಿನಂದಿಸಲಾಗುವುದು. ಅದರ ಜತೆಯಲ್ಲೇ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಸಿದ್ಧತೆ ಬಗ್ಗೆಯೂ ಚರ್ಚೆ ನಡೆಸಲಾಗುವುದು. ತಳ ಮಟ್ಟದಿಂದ ಪಕ್ಷ ಸಂಘಟನೆ ಚುರುಕುಗೊಳಿಸುವ ಕುರಿತು ಎಚ್‌.ಡಿ. ದೇವೇಗೌಡ, ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ’ ಎಂದು ಎಚ್‌.ಕೆ. ಕುಮಾರಸ್ವಾಮಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.