ADVERTISEMENT

ಕಾಂಗ್ರೆಸ್‌ ಸೇರಲು ಸಾ.ರಾ. ಗೋವಿಂದು ಒಲವು?

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 22:06 IST
Last Updated 9 ಜುಲೈ 2021, 22:06 IST
ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು. ಮಾಜಿ ಶಾಸಕ ಮಧು ಬಂಗಾರಪ್ಪ ಕೂಡ ಇದ್ದರು
ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಮಾಡಿ ಮಾತುಕತೆ ನಡೆಸಿದರು. ಮಾಜಿ ಶಾಸಕ ಮಧು ಬಂಗಾರಪ್ಪ ಕೂಡ ಇದ್ದರು   

ಬೆಂಗಳೂರು: ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದು, ಪಕ್ಷದ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ.

ಇದೇ 17ರಂದು ಬಸವೇಶ್ವರನಗರದಲ್ಲಿ ಪಡಿತರ ಕಿಟ್‌ ವಿತರಣೆ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಅದರಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲು ತೆರಳಿದ್ದ ಗೋವಿಂದು, ಪಕ್ಷ ಸೇರ್ಪಡೆ ಕುರಿತೂ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ.

ಗೋವಿಂದು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಇತ್ತೀಚೆಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜುಲೈ 17ರ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ನಾಯಕರು, ಮುಖಂಡರಿಗೆ ಆಹ್ವಾನ ನೀಡಿದ್ದಾರೆ. ವಿಧಾನಸಭಾ ಚುನಾವಣೆಗೂ ಮೊದಲೇ ಪಕ್ಷ ಸೇರುವ ಯೋಚನೆಯಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗೋವಿಂದು, ‘ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದೆ. ಪಕ್ಷ ಸೇರ್ಪಡೆ ಕುರಿತು ಅಂತಿನ ನಿರ್ಧಾರ ಕೈಗೊಂಡ ಬಳಿಕ ಹೇಳುವೆ’ ಎಂದರು.

ಶಾಸಕ ಎಚ್‌.ಕೆ. ಪಾಟೀಲ, ಮಾಜಿ ಶಾಸಕ ಮಧು ಬಂಗಾರಪ್ಪ ಕೂಡ ಡಿ.ಕೆ. ಶಿವಕುಮಾರ್‌ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದು, ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.