
ಅಂತರ್ಜಲ (ಸಾಂದರ್ಭಿಕ ಚಿತ್ರ)
ನವದೆಹಲಿ: ಕರ್ನಾಟಕದ ಐದು ಜಿಲ್ಲೆಗಳಲ್ಲಿ ಅಂತರ್ಜಲದ ವಿಪರೀತ ಬಳಕೆ ಆಗಿದೆ ಎಂದು ಕೇಂದ್ರ ಅಂತರ್ಜಲ ಮಂಡಳಿ ವರದಿ ತಿಳಿಸಿದೆ.
ಮಂಡಳಿಯು 2025ನೇ ಸಾಲಿನ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಕೋಲಾರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಆಗಿದೆ ಎಂದು ತಿಳಿಸಿದೆ.
ಬೆಂಗಳೂರು ದಕ್ಷಿಣ (ರಾಮನಗರ) ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಂತರ್ಜಲ ಸ್ಥಿತಿ ಗಂಭೀರವಾಗಿದೆ. ವಿಜಯನಗರ, ಬಾಗಲಕೋಟೆ, ಗದಗ, ಬೆಳಗಾವಿ, ಚಾಮರಾಜನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಅಂತರ್ಜಲದ ಅತಿ ಬಳಕೆ ಆಗಿದೆ ಎಂದು ವರದಿ ಉಲ್ಲೇಖಿಸಿದೆ.
ಅಂತರ್ಜಲ ಮರುಪೂರಣಕ್ಕಾಗಿ ಜಲಶಕ್ತಿ ಅಭಿಯಾನದಡಿ ರಾಜ್ಯದಲ್ಲಿ 17 ಲಕ್ಷ ಜಲ ಸಂರಕ್ಷಣೆ ಘಟಕಗಳನ್ನು ನಿರ್ಮಿಸಲಾಗಿದೆ. ಇದರಿಂದಾಗಿ, ಅಂತರ್ಜಲ ಮಟ್ಟ ಸ್ವಲ್ಪ ಹೆಚ್ಚಳ ಆಗಿದೆ. ರಾಜ್ಯದಲ್ಲಿ ಒಟ್ಟಾರೆ ಅಂತರ್ಜಲ ಬಳಕೆ ಪ್ರಮಾಣ 2024ರಲ್ಲಿ ಶೇ 68.44 ಇತ್ತು. 2025ರಲ್ಲಿ ಶೇ 66.49ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.