
ಬೆಂಗಳೂರು: ‘ಐದು ಗ್ಯಾರಂಟಿ ಯೋಜನೆಗಳಿಗೆ ಈವರೆಗೆ ಒಟ್ಟು ₹1.20 ಲಕ್ಷ ಕೋಟಿ ವೆಚ್ಚವಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಹಣದ ಸಹಾಯವಲ್ಲ, ಗೌರವದ ಭರವಸೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ.
‘ಗ್ಯಾರಂಟಿಗಳು ಸ್ಥಗಿತಗೊಳ್ಳಲಿವೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಆದರೆ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸ್ಪಷ್ಟಪಡಿಸಿರುವಂತೆ ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ’ ಎಂದಿದ್ದಾರೆ.
‘ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಯ 26ನೇ ಕಂತಿನ ₹2 ಸಾವಿರ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ. ಆ ಮೂಲಕ, ಪ್ರತಿ ಮನೆಯ ಯಜಮಾನಿಗೆ ಈವರೆಗೆ ಒಟ್ಟು ₹52 ಸಾವಿರ ಪಾವತಿ ಆದಂತಾಗಿದೆ’ ಎಂದು ಅವರು ತಿಳಿಸಿದ್ದಾರೆ.
‘ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದವರಿಗೆ ಸರ್ಕಾರವು ಇದುವರೆಗೆ ₹62,345.34 ಕೋಟಿ ವೆಚ್ಚ ಮಾಡಿದೆ. 26 ಕಂತುಗಳ ಹಣ ಈಗಾಗಲೇ ಪಾವತಿಯಾಗಿದ್ದು, 27ನೇ ಕಂತಿನ ಹಣ ಶೀಘ್ರದಲ್ಲಿ ಎಲ್ಲ 31 ಜಿಲ್ಲೆಗಳ ಫಲಾನುಭವಿಗಳಿಗೆ ತಲುಪಲಿದೆ’ ಎಂದು ಅವರು ವಿವರಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಿಂದ ಕುಟುಂಬದ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳವಾಗಿದೆ. ಪಕ್ಷಬೇಧವಿಲ್ಲದೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗುತ್ತಿದೆದಿನೇಶ್ ಗೂಳಿಗೌಡ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.