ADVERTISEMENT

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತರಾಟೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 6:45 IST
Last Updated 6 ಆಗಸ್ಟ್ 2020, 6:45 IST
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ‌ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ‌ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.‌‌ ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.