ADVERTISEMENT

‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ; ವರದಿ ಕೇಳಿದ ರಾಜ್ಯಪಾಲರು

ಮೈಸೂರು ವಿ.ವಿಯಲ್ಲಿ ಪ್ರತಿಭಟನೆ; ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 9 ಜನವರಿ 2020, 16:52 IST
Last Updated 9 ಜನವರಿ 2020, 16:52 IST
ಮೈಸೂರು ವಿಶ್ವವಿದ್ಯಾಲಯ ಆವರಣದಲ್ಲಿ ಬುಧವಾರ ಸಂಜೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರೊಬ್ಬರು ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದರು –ಪ್ರಜಾವಾಣಿ ಚಿತ್ರ
ಮೈಸೂರು ವಿಶ್ವವಿದ್ಯಾಲಯ ಆವರಣದಲ್ಲಿ ಬುಧವಾರ ಸಂಜೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರೊಬ್ಬರು ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದರು –ಪ್ರಜಾವಾಣಿ ಚಿತ್ರ   

ಮೈಸೂರು: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ, ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ, ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಗೊಂಡ ಬಗ್ಗೆ ವರದಿ ನೀಡುವಂತೆ ರಾಜ್ಯಪಾಲರ ಕಚೇರಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸೂಚಿಸಿದೆ.

ಅಲ್ಲದೇ, ಪ್ರತಿಭಟನೆಯ ಆಯೋಜಕರಲ್ಲಿ ಒಬ್ಬರಾದ ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ ಅವರ ವಿರುದ್ಧ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ಅನ್ವಯ ಜಯಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.

ಅನುಮತಿ ಇರಲಿಲ್ಲ:‘ಪ್ರತಿಭಟನೆಗೆ ವಿಶ್ವವಿದ್ಯಾಲಯ ಅನುಮತಿ ನೀಡಿರಲಿಲ್ಲ. ಪ್ರತಿಭಟನೆ ನಡೆಸಿದ ಸಂಶೋಧಕರ ಸಂಘಕ್ಕೆ ನೋಟಿಸ್ ನೀಡಲಾಗಿದೆ. ಈ ಕುರಿತ ಸಮಗ್ರ ವರದಿಯನ್ನು ರಾಜ್ಯಪಾಲರ ಕಚೇರಿಗೆ ಸಲ್ಲಿಸಲಾಗುವುದು’ ಎಂದು ಕುಲ‍ಪತಿ ಪ್ರೊ.ಜಿ. ಹೇಮಂತಕುಮಾರ್ ಪ್ರತಿಕ್ರಿಯಿಸಿದರು.

ADVERTISEMENT

ವಿದ್ಯಾರ್ಥಿನಿಗಾಗಿ ಶೋಧ: ‘ಸ್ವಯಂಪ್ರೇರಿತವಾಗಿ, ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರತಿಭಟನೆಯ ಆಯೋಜಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಆ ಫಲಕ ಹಿಡಿದ ವಿದ್ಯಾರ್ಥಿನಿಯನ್ನು ಹುಡುಕಲಾಗುತ್ತಿದೆ’ ಎಂದು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ತಿಳಿಸಿದರು.

ಪ್ರತಿಭಟನೆ ವೇಳೆ ಕೆಲವರು ದೇಶದ ಸಾರ್ವಭೌಮತ್ವಕ್ಕೆ ದಕ್ಕೆ ತರುವಂತೆ ಘೋಷಣೆ ಕೂಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕುಲಸಚಿವ ಆರ್‌. ಶಿವಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

***

‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದು, ಮೈಸೂರಿಗೆ ಹಾಗೂ ಮಾನಸ ಗಂಗೋತ್ರಿಗೆ ಕಪ್ಪುಚುಕ್ಕೆ. ಪೊಲೀಸರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ
-ಎಲ್.ನಾಗೇಂದ್ರ, ಶಾಸಕ

ವಿಶ್ವವಿದ್ಯಾಲಯಗಳಲ್ಲಿ ಈ ರೀತಿಯ ಘಟನೆ ನಡೆಯಬಾರದು. ಕಳಂಕದ ಜತೆ ವಿದ್ಯಾರ್ಥಿ ಜೀವನವೂ ಹಾಳಾಗುತ್ತದೆ. ವಿದ್ಯಾರ್ಥಿಗಳ ನಡುವೆ ವಿಷ ಬೀಜ ಬಿತ್ತಲಾಗುತ್ತಿದೆ.
-ವಿ.ಶ್ರೀನಿವಾಸಪ್ರಸಾದ್, ಸಂಸದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.