
ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೀಡುವಂತೆ ಇನ್ನು ಮುಂದೆ ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕಗಳು ಉಚಿತವಾಗಿ ಸಿಗಲಿವೆ.
ಮುಂದಿನ ಶೈಕ್ಷಣಿಕ ವರ್ಷದಿಂದ (2026–27) ಈ ಯೋಜನೆ ಅನುಷ್ಠಾನಗೊಲಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯುನಲ್ಲಿ ಕಲಿಯುತ್ತಿರುವ ಸುಮಾರು 15 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ.
ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಇದುವರೆಗೂ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಉಚಿತ ಪಠ್ಯಪುಸ್ತಕ ಯೋಜನೆಯನ್ನು ದ್ವಿತೀಯ ಪಿಯುಸಿವರೆಗೂ ವಿಸ್ತರಿಸಲಾಗುತ್ತಿದೆ.
ಪ್ರಸ್ತುತ ರಾಜ್ಯದಲ್ಲಿ 1,319 ಸರ್ಕಾರಿ, 815 ಅನುದಾನಿತ ಪದವಿಪೂರ್ವ ಕಾಲೇಜುಗಳು ಇವೆ. ಪ್ರಥಮ ಹಾಗೂ ದ್ವಿತೀಯ ವರ್ಷ ಸೇರಿ ಸರ್ಕಾರಿ ಕಾಲೇಜುಗಳಲ್ಲಿ 13.17 ಲಕ್ಷ ಹಾಗೂ ಅನುದಾನಿತ ಕಾಲೇಜುಗಳಲ್ಲಿ 1.91 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 34 ವಿಷಯಗಳನ್ನು ಬೋಧಿಸಲಾಗುತ್ತಿದೆ.
ಪದವಿಪೂರ್ವ ಕಾಲೇಜುಗಳಿಗೆ 2026–27ನೇ ಸಾಲಿನಿಂದ ಉಚಿತ ಪಠ್ಯಪುಸ್ತಕ ವಿತರಿಸುವ ಯೋಜನೆ ಅನುಷ್ಠಾನಕ್ಕೆ ತರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಖಚಿತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.