ADVERTISEMENT

ಮುಂದಿನ ವಾರ ಸಂಪುಟ ಪುನರ್‌ ರಚನೆ ಚರ್ಚೆ: ಸಿಎಂ ಬೊಮ್ಮಾಯಿ

ಪಿಟಿಐ
Published 7 ಏಪ್ರಿಲ್ 2022, 7:01 IST
Last Updated 7 ಏಪ್ರಿಲ್ 2022, 7:01 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ನವದೆಹಲಿ: ರಾಜ್ಯದ ಸಚಿವ ಸಂಪುಟ ಪುನರ್‌ ರಚನೆಯ ಕುರಿತಂತೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದು, ಮುಂದಿನ ವಾರ ಇನ್ನಷ್ಟು ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ‘ಸಚಿವ ಸಂಪುಟ ಪುನರ್ ರಚನೆ ಕುರಿತು ನಡ್ಡಾ ಅವರ ಜೊತೆ ವಿಸ್ತೃತ ಚರ್ಚೆ ನಡೆದಿದೆ. ಪಕ್ಷದ ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗಾಗಿ ಕರ್ನಾಟಕಕ್ಕೆ ಭೇಟಿ ನೀಡಿದ ಸಂದರ್ಭ ಹೆಚ್ಚುವರಿ ಚರ್ಚೆ ನಡೆಸಲಾಗುವುದು ಎಂದು ನಡ್ಡಾ ಹೇಳಿದ್ದಾರೆ’ ಎಂದು ತಿಳಿಸಿದ್ದಾರೆ.

ಏಪ್ರಿಲ್ 16-17ರಂದು ನಡೆಯಲಿರುವ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯ ನಂತರ, ಪಕ್ಷದ ಹಿರಿಯ ನಾಯಕರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಸಮಾಲೋಚಿಸಿದ ನಂತರ ಸಂಪುಟ ಪುನರ್‌ ರಚನೆ ಕುರಿತಂತೆ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಬೊಮ್ಮಾಯಿ ಹೇಳಿದರು.

ADVERTISEMENT

ರಾಜ್ಯ ಕಾರ್ಯಕಾರಿ ಸಮಿತಿ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲು ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸುವಂತೆಯೂ ನಡ್ಡಾಜಿ ಹೇಳಿದ್ದಾರೆ ಎಂದು ಸಿಎಂ ಹೇಳಿದರು.

ಎರಡು ದಿನಗಳ ಭೇಟಿಗಾಗಿ ನವದೆಹಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರು ಮತ್ತು ಪಕ್ಷದ ಮುಖಂಡರನ್ನು ಭೇಟಿಯಾಗಿದ್ದರು. ಇತ್ತೀಚಿಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚುತ್ತಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಮೂಲಕ ಕರ್ನಾಟಕ ಕ್ಯಾಬಿನೆಟ್‌ನಲ್ಲಿ ಗುಜರಾತ್‌ ಮಾದರಿಯ ಬದಲಾವಣೆಯನ್ನು ತರಲು ಕೆಲವು ಶಾಸಕರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.