ADVERTISEMENT

ನೇತ್ರಾವತಿ ನದಿಗೆ ಮಹಿಳೆಯರು ಕಸ ಎಸೆದ ಪ್ರಕರಣ: ಕಾರು ವಶ, ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 1 ಮೇ 2021, 14:47 IST
Last Updated 1 ಮೇ 2021, 14:47 IST
ಪೊಲೀಸರು ವಶಕ್ಕೆ ಪಡೆದಿರುವ ಕಾರು.
ಪೊಲೀಸರು ವಶಕ್ಕೆ ಪಡೆದಿರುವ ಕಾರು.   

ಮಂಗಳೂರು: ಕಾರಿನಲ್ಲಿ ಬಂದ ಮಹಿಳೆಯರು ಸೇತುವೆಯಿಂದ ನೇತ್ರಾವತಿ ನದಿಗೆ ಕಸ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣಾ ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು, ಉಳ್ಳಾಲ ಸೇತುವೆಯಲ್ಲಿ ಕಾರನ್ನು ನಿಲ್ಲಿಸಿ, ತ್ಯಾಜ್ಯದ ಕಟ್ಟುಗಳನ್ನು ನದಿಗೆ ಎಸೆದಿದ್ದರು. ಹಿಂದಿನ ಕಾರಿನಲ್ಲಿದ್ದವರು ಈ ದೃಶ್ಯವನ್ನು ಮೊಬೈಲ್‌ನಲ್ಲೇ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.

ಉಳ್ಳಾಲ ಸೇತುವೆಯು ಆತ್ಮಹತ್ಯೆಯ ತಾಣವಾಗಿ ಮಾರ್ಪಟ್ಟ ಬಳಿಕ ₹50 ಲಕ್ಷ ವೆಚ್ಚದಲ್ಲಿ ಸೇತುವೆಯ ನಾಲ್ಕು ಕಡೆಗಳಲ್ಲೂ ತಂತಿ ಬೇಲಿ ಅಳವಡಿಸಲಾಗಿದೆ. ಆತ್ಮಹತ್ಯೆ ಪ್ರಕರಣ ಕಡಿಮೆಯಾದರೂ, ತ್ಯಾಜ್ಯ ಎಸೆಯುವವರಿಗೆ ಕಡಿವಾಣ ಬಿದ್ದಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿಡಾಡುವ ವಿಡಿಯೊದಲ್ಲಿ ಕಾರಿನ ಸಂಖ್ಯೆ ಸ್ಪಷ್ಟವಾಗಿ ಕಾಣುತ್ತಿದ್ದು, ಅದರ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದರು.

ADVERTISEMENT

ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರ ದೂರಿನ ಮೇರೆಗೆ ಶೈಲಜಾ ನಾಯಕ್, ರಚನಾ ನಾಯಕ್, ಸುಶೀಲಾ ಎಂಬುವವರ ವಿರುದ್ಧ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನ ನೋಂದಣಿ ಸಂಖ್ಯೆಯ ಆಧಾರದಲ್ಲಿ ಪೊಲೀಸರು ತನಿಖೆ ಕೈಗೆತ್ತಿಕೊಂಡು ಕಾರನ್ನು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.