ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಶೇಷ ಕೋರ್ಟ್‌ ವಿಳಂಬಕ್ಕೆ ಹೈಕೋರ್ಟ್‌ ಕಿಡಿ

ಕಲ್ಬುರ್ಗಿ–ಗೌರಿ ಲಂಕೇಶ್‌ ಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 18:23 IST
Last Updated 22 ಜುಲೈ 2024, 18:23 IST
ವೀಸಾ ಅವಧಿ ಮುಗಿದವರ ವಿರುದ್ಧ ಹೈಕೋರ್ಟ್‌ ಕಿಡಿ
ವೀಸಾ ಅವಧಿ ಮುಗಿದವರ ವಿರುದ್ಧ ಹೈಕೋರ್ಟ್‌ ಕಿಡಿ   

ಬೆಂಗಳೂರು: ಸಂಶೋಧಕ ಎಂ.ಎಂ.ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ವಿಚಾರಣೆಯ ಸಂಬಂಧ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸುವ ಸಂಬಂಧ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಕರಣದ 4ನೇ ಆರೋಪಿ ವಾಸುದೇವ್ ಭಗವಾನ್ ಸೂರ್ಯವಂಶಿ ಅಲಿಯಾಸ್ ವಾಸು ಅಲಿಯಾಸ್ ಮೆಕ್ಯಾನಿಕ್ ಹಾಗೂ 6ನೇ ಆರೋಪಿ ಅಮಿತ್ ಬಡ್ಡಿ ಅಲಿಯಾಸ್ ಅಮಿತ್ ಅಲಿಯಾಸ್ ಗೋವಿಂದ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್‌, ‘ಆರೋಪಿಗಳು ಕಳೆದ ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಆ ಕೆಲಸವಾಗಿಲ್ಲ. ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷಿಗಳ ಪೈಕಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಹೀಗಾಗಿ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಪ್ರಾಸಿಕ್ಯೂಟರ್‌ ಅಶೋಕ್ ಎನ್‌.ನಾಯಕ್‌, ‘ಅಡ್ವೊಕೇಟ್‌ ಜನರಲ್‌ ಈ ಕುರಿತಂತೆ ಸಂಬಂಧಿಸಿದವರ ಜೊತೆ ಮಾತುಕತೆ ನಡೆಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ಈ ವಿಚಾರದ ಬಗೆಗಿನ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದರು. ಇದನ್ನು ಮನ್ನಿಸಿದ ಪೀಠವು ವಿಚಾರಣೆಯನ್ನು ಮಂಗಳವಾರಕ್ಕೆ (ಜುಲೈ 23) ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.