ADVERTISEMENT

ಗೋಕರ್ಣ ದೇಗುಲ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಉಪಾಧಿವಂತರು–ವಿದ್ವಾಂಸರ ಬದಲು

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2023, 23:32 IST
Last Updated 21 ಆಗಸ್ಟ್ 2023, 23:32 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಗೋಕರ್ಣದ ‘ಶ್ರೀ ಮಹಾಬಲೇಶ್ವರ ದೇವಸ್ಥಾನ‘ದ ಆಡಳಿತ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ನಾಮ ನಿರ್ದೇಶನಗೊಂಡಿದ್ದ ಇಬ್ಬರು ಉಪಾಧಿವಂತರು ಮತ್ತು ಇಬ್ಬರು ವಿದ್ವಾಂಸರನ್ನು ಬದಲಾಯಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹೊಸನಗರದ ರಾಮಚಂದ್ರಾಪುರ ಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ ಹೆಗಡೆ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ.ಎನ್‌. ಮನಮೋಹನ್‌ ವಾದ ಮಂಡಿಸಿ ರಾಜ್ಯ ಸರ್ಕಾರದ ಆದೇಶವನ್ನು ಆಕ್ಷೇಪಿಸಿದರು. ಇದಕ್ಕೆ ಪ್ರತಿಯಾಗಿ ನ್ಯಾಯಪೀಠವು, ‘ಯಾವ ಆಧಾರದಲ್ಲಿ ಈ ಆದೇಶ ಹೊರಡಿಸಿದ್ದೀರಿ‘ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು. 

ADVERTISEMENT

‘ಯಾವ ತಪ್ಪಾಗಿದೆ ಎಂದು ಈ ತಿದ್ದುಪಡಿ ಮಾಡಿದ್ದೀರಿ, ಕಾಲಕಾಲಕ್ಕೆ ಈ ರೀತಿಯ ಬದಲಾವಣೆ ಮಾಡಲು ಸುಪ್ರೀಂ ಕೋರ್ಟ್‌ ಆದೇಶದಲ್ಲಿ ಎಲ್ಲಿ ವಿವರಿಸಲಾಗಿದೆ. ಇಂತಹ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬುದು ಮೇಲ್ನೋಟಕ್ಕೇ ತಿಳಿದು ಬರುತ್ತದೆಯಲ್ಲವೇ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿತು. 

ಪ್ರಕರಣವೇನು?: ಗೋಕರ್ಣದ ‘ಶ್ರೀ ಮಹಾಬಲೇಶ್ವರ ದೇವಸ್ಥಾನ‘ದ ಡಿ–ನೋಟಿಫೈ ಪ್ರಕರಣದ ಸಿವಿಲ್‌ ದಾವೆಯಲ್ಲಿ ಸುಪ್ರೀಂ ಕೋರ್ಟ್‌ 2021ರ ಏಪ್ರಿಲ್‌ 19ರಂದು ಮಧ್ಯಂತರ ಆದೇಶ ನೀಡಿತ್ತು. ಈ ಆದೇಶದ ಅನುಸಾರ ದೇವಸ್ಥಾನದ ಆಡಳಿತ ನಿರ್ವಹಣೆಗಾಗಿ 2021ರ ಮೇ 4ರಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್‌.ಶ್ರೀಕೃಷ್ಣ ನೇತೃತ್ವದಲ್ಲಿ ಅಧ್ಯಕ್ಷರನ್ನೂ ಒಳಗೊಂಡಂತೆ 8 ಸದಸ್ಯರ ಮೇಲ್ವಿಚಾರಣಾ ಸಮಿತಿ ರಚಿಸಲಾಗಿತ್ತು.

ಈ ಸಮಿತಿಯಲ್ಲಿದ್ದ ಉಪಾಧಿವಂತರಾದ ಮಹಾಬಲ ಉಪಾಧ್ಯೆ, ದತ್ತಾತ್ರೇಯ ಹಿರೇಗಂಗೆ ಮತ್ತು ವಿದ್ವಾಂಸರಾದ ಪರಮೇಶ್ವರ ಮಾರ್ಕಾಂಡೆ ಹಾಗೂ ಮುರಳೀಧರ ಪ್ರಭು ಅವರನ್ನು ಕೈಬಿಟ್ಟ ರಾಜ್ಯ ಸರ್ಕಾರ; ಉಪಾಧಿವಂತರ ಸ್ಥಾನಕ್ಕೆ ಗಣಪತಿ ಶಿವರಾಮ ಹಿರೇಭಟ್ಟ, ಸುಬ್ರಹ್ಮಣ್ಯ ಚಂದ್ರಶೇಖರ ಅಡಿ ಹಾಗೂ ವಿದ್ವಾಂಸರ ಸ್ಥಾನಕ್ಕೆ ಪರಮೇಶ್ವರ ಸುಬ್ರಹ್ಮಣ್ಯ ಪ್ರಸಾದ ರಮಣಿ ಹಾಗೂ ಮಹೇಶ್‌ ಗಣೇಶ್‌ ಹಿರೇಗಂಗೆ ಅವರನ್ನು ನಾಮ ನಿರ್ದೇಶನ ಮಾಡಿತ್ತು. 

ಈ ಕುರಿತಂತೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಕಳೆದ ತಿಂಗಳ 12ರಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.