ADVERTISEMENT

ವೃತ್ತಿಪರ ಕೋರ್ಸ್‌ಗಳ ಪ್ರವೇಶ: ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 9:12 IST
Last Updated 22 ಜೂನ್ 2022, 9:12 IST
   

ಬೆಂಗಳೂರು: ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಪ್ರಸಕ್ತ ವರ್ಷ ಶೇಕಡ 10ರಷ್ಟು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.

ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜತೆ ಬುಧವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಈ ವಿಷಯ ತಿಳಿಸಿದರು.

ಎರಡು ವರ್ಷಗಳ ಕಾಲ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡಿರಲಿಲ್ಲ. ಈ ವರ್ಷ ಶೇಕಡ 25ರಷ್ಟು ಶುಲ್ಕ ಹೆಚ್ಚಿಸುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಬೇಡಿಕೆ ಇಟ್ಟಿದ್ದವು. ಆದರೆ, ಶುಲ್ಕ ನಿಗದಿ ಸಮಿತಿ ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಅದೇ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು ಎಂದರು.

ADVERTISEMENT

ಒಂದೇ ಸಿಇಟಿಗೆ ಸಹಮತ: ವೃತ್ತಿಪರ ಶಿಕ್ಷಣ ಕೋರ್ಸ್ ಪ್ರವೇಶಕ್ಕೆ ರಾಜ್ಯ ಸರ್ಕಾರ ಮತ್ತು ಕಾಮೆಡ್-ಕೆ ಪ್ರತ್ಯೇಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುತ್ತಿವೆ. ಮುಂದಿನ ವರ್ಷದಿಂದ ಒಂದೇ ಸಿಇಟಿ ನಡೆಸಲು ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಹಮತ ವ್ಯಕ್ತಪಡಿಸಿದೆ. ಶೀಘ್ರದಲ್ಲಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.