ADVERTISEMENT

ರಾಜ್ಯ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 6:35 IST
Last Updated 1 ಮಾರ್ಚ್ 2023, 6:35 IST
   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ತಕ್ಷಣದಲ್ಲೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಏಳನೇ ವೇತನ ಆಯೋಗವನ್ನು ಈಗಾಗಲೇ ನೇಮಿಸಲಾಗಿದೆ. ಅವರಿಂದ ವರದಿ ಪಡೆದು ಶೀಘ್ರದಲ್ಲಿ ವೇತನ ಪರಿಷ್ಕರಣೆಗೆ ಪ್ರಯತ್ನ ನಡೆಯುತ್ತಿದೆ. ಈಗ ಮಧ್ಯಂತರ ಪರಿಹಾರ ಘೋಷಿಸಲು ನಿರ್ಧರಿಸಲಾಗಿದೆ ಎಂದರು.

ಹಳೆಯ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ನೌಕರರರ ಸಂಘ ಮುಂದಿಟ್ಟಿತ್ತು. ಈ ಕುರಿತು ಅಧ್ಯಯನ ನಡೆಸಲು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ನೇಮಿಸಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಹಳೆಯ ಪಿಂಚಣಿ ಪದ್ಧತಿ ಕುರಿತು ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ. ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ADVERTISEMENT

ಈ ಎರಡೂ ವಿಷಯಗಳಲ್ಲಿ ನೌಕರರ ಸಂಘ ಮತ್ತು ಸರ್ಕಾರ ಒಪ್ಪಂದಕ್ಕೆ ಬಂದಿವೆ. ಬುಧವಾರವೇ ಈ ಕುರಿತು ಆದೇಶಗಳನ್ನು ಹೊರಡಿಸಲಾಗುವುದು. ನಂತರ ಸರ್ಕಾರಿ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.