ADVERTISEMENT

ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆ: ಪರೀಕ್ಷೆ ಬರೆಯಲಿರುವ 24,800 ಮಂದಿ

ಕೆಇಎ: ಸಿಸಿಟಿವಿ ಕಣ್ಗಾವಲಿನಲ್ಲಿ‌ ನೇಮಕಾತಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 23:39 IST
Last Updated 19 ಡಿಸೆಂಬರ್ 2025, 23:39 IST
<div class="paragraphs"><p>ಪರೀಕ್ಷೆ</p></div>

ಪರೀಕ್ಷೆ

   

ಬೆಂಗಳೂರು: ಬಿಡಿಎ, ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿಸೆಂಬರ್‌ 20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು‌ 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಷ್ಟೂ‌ ಮಂದಿಗೆ ಮೂರು ದಿನ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದರು.

ADVERTISEMENT

ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು, ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.

ಡಿಸೆಂಬರ್ 20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಒಟ್ಟು 3,486 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರು, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳ 51 ಕೇಂದ್ರಗಳಲ್ಲಿ ಡಿಸೆಂಬರ್ 21ರಂದು ನಡೆಯುವ ಪರೀಕ್ಷೆಯನ್ನು 21,198 ಮಂದಿ ಹಾಗೂ ಡಿಸೆಂಬರ್ 22ರಂದು ಬೆಂಗಳೂರಿನಲ್ಲಿ ಮಾತ್ರ‌ ನಡೆಯುವ ಪರೀಕ್ಷೆಯನ್ನು 1,166 ಮಂದಿ ತೆಗೆದುಕೊಂಡಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವಿವಿಧ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ತಮಗೆ ಅನ್ವಯವಾಗುವ ದಿನ ನಿಗದಿತ ಕೇಂದ್ರಕ್ಕೆ ಹೋಗಿ ಪರೀಕ್ಷೆ ಬರೆಯಬೇಕು ಎಂದು ಅವರು ವಿವರಿಸಿದರು.

ಎಲ್ಲರಿಗೂ ಕನ್ನಡ ಪರೀಕ್ಷೆ: ಕಲ್ಯಾಣ ಕರ್ನಾಟಕ ಸೇರಿದಂತೆ ಇತರ ಎಲ್ಲರಿಗೂ ಡಿಸೆಂಬರ್ 28ರಂದು ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.