ADVERTISEMENT

ಕೋವಿಡ್‌ ನಿಯಂತ್ರಣ: ಜು.31, ಸಂಜೆ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 3:30 IST
Last Updated 31 ಜುಲೈ 2021, 3:30 IST
ಸಿಎಂ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ
ಸಿಎಂ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಕೊರೊನಾ ಹರಡುವುದನ್ನು ತಡೆಯಲು ಆದ್ಯತೆಯ ಕೆಲಸವಾಗಿದ್ದು, ಜಿಲ್ಲಾಡಳಿತದ ಜತೆ ಶನಿವಾರ ಸಂಜೆ ವಿಡಿಯೊ ಸಂವಾದ ನಡೆಸುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲಾಡಳಿತದ ಜತೆ ಸಂಜೆ 5.30ಕ್ಕೆ ಸಭೆ ನಿಗದಿಯಾಗಿದೆ.

ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವ ಮೂಲಕ ಬೇರೆ ರಾಜ್ಯಗಳಿಂದ ಬರುವವರ ಮೇಲೂ ನಿಗಾ ವಹಿಸಲಾಗುವುದು. ರಾಜ್ಯ ಪ್ರವೇಶಿಸುವವರನ್ನು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲು ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ರೈಲುಗಳ ಮೂಲಕ ಬರುವವರನ್ನೂ ನಿಲ್ದಾಣದಲ್ಲೇ ಪರೀಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ADVERTISEMENT

ಉತ್ತರ ಕರ್ನಾಟಕ ಭಾಗದ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ರಾಯಚೂರು, ಕಲಬುರ್ಗಿ ಹಾಗೂ ಕೋಲಾರ ಗಡಿಗಳಲ್ಲೂ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಲಾಗುವುದು ಎಂದರು.

ಕೋವಿಡ್‌ ಪ್ರಕರಣಗಳು ಏರಿಕೆ ಕಂಡ ಬೆನ್ನಲ್ಲೇ ಸೋಂಕು ನಿಯಂತ್ರಿಸಲು ಅಗತ್ಯವಿರುವ ಹೆಚ್ಚುವರಿ ನಿರ್ಬಂಧಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಎಲ್ಲ ಜಿಲ್ಲಾಧಿಕಾರಿಗಳು ಮತ್ತುಬಿಬಿಎಂಪಿ ಮುಖ್ಯ ಆಯುಕ್ತರಿಗೆ ನೀಡಲಾಗಿದೆ.

ಈ ಕುರಿತು ಶುಕ್ರವಾರ ಆದೇಶ ಹೊರಡಿಸಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌, ‘ಕೆಲವು ದಿನಗಳಿಂದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದೆ. ನೆರೆಯ ರಾಜ್ಯಗಳ ಗಡಿ ಭಾಗಗಳಲ್ಲೂ ಸೋಂಕು ಹರಡುತ್ತಿದೆ. ಸ್ಥಳೀಯವಾಗಿ ಪರಿಸ್ಥಿತಿ ಅವಲೋಕಿಸಿ, ಬಿಗಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪರೀಕ್ಷೆ, ಸೋಂಕಿತರನ್ನು ಪ್ರತ್ಯೇಕಿಸುವುದು ಮತ್ತು ಚಿಕಿತ್ಸೆ ನೀಡುವುದಕ್ಕೆ ಒತ್ತು ನೀಡಬೇಕು. ಕೋವಿಡ್‌ ಲಸಿಕೆ ನೀಡುವುದನ್ನೂ ಆದ್ಯತೆಯ ಕೆಲಸವಾಗಿ ಮಾಡಬೇಕು’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.