ADVERTISEMENT

ಸರ್ಕಾರಿ ಜಮೀನು ಒತ್ತುವರಿ ಆರೋಪ | HDK ಅರ್ಜಿ: ಆದೇಶ ವಿಸ್ತರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2025, 15:47 IST
Last Updated 27 ಮಾರ್ಚ್ 2025, 15:47 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್‌ ಅವರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಿರುವ ನೋಟಿಸ್‌ ಅನುಸಾರ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂಬ ಈ ಹಿಂದಿನ ಆದೇಶವನ್ನು ಹೈಕೋರ್ಟ್‌ ವಿಸ್ತರಿಸಿ ಆದೇಶಿಸಿದೆ.

ಈ ಸಂಬಂಧ ಎಚ್‌.ಡಿ.ಕುಮಾರ ಸ್ವಾಮಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎನ್‌.ಎಸ್‌.ಸಂಜಯಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್‌ ವಿ.ರೋಣ ಅವರು, ‘ಕರ್ನಾಟಕ ಭೂ ಕಂದಾಯ ಕಾಯ್ದೆ–1964ಕ್ಕೆ ತಿದ್ದುಪಡಿ ತರುವ ಮೂಲಕ ಸರ್ಕಾರಿ ಜಮೀನು ಒತ್ತುವರಿ ಕುರಿತಂತೆ ಒತ್ತುವರಿದಾರರಿಂದ ವಿವರಣೆ ಪಡೆದು ಮುಂದಿನ ಕ್ರಮ ಜರುಗಿಸಲು ತಹಶೀಲ್ದಾರ್‌ಗೆ ಅಧಿಕಾರ ಕಲ್ಪಿಸಲಾಗಿದೆ. ಅದರಂತೆಯೇ ಈ ಪ್ರಕರಣದಲ್ಲೂ ತಹಶೀಲ್ದಾರ್‌ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಅವರಿಗೆ ನೋಟಿಸ್‌ ನೀಡಿದ್ದಾರೆ. ಹಾಗಾಗಿ, ಈ ಅರ್ಜಿ ವಜಾಗೊಳಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಪರ ಪದಾಂಕಿತ ಹಿರಿಯ ವಕೀಲ ಉದಯ ಹೊಳ್ಳ ಅವರು, ‘ತಹಶೀಲ್ದಾರ್ ನೋಟಿಸ್ ನೀಡುವುದಕ್ಕೆ ಅವಕಾಶ ಕಲ್ಪಿಸಿರುವ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತರಲಾಗಿರುವ ತಿದ್ದುಪಡಿಯ ಸಿಂಧುತ್ವವನ್ನೇ ಪ್ರಶ್ನಿಸಲಾಗುವುದು. ಈ ಸಂಬಂಧ ಅರ್ಜಿಯನ್ನು ತಿದ್ದುಪಡಿ ಮಾಡುತ್ತೇವೆ. ಅದಕ್ಕಾಗಿ ಸಮಯಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು’ ಎಂಬ ಮಧ್ಯಂತರ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಏಪ್ರಿಲ್‌ 1ಕ್ಕೆ ಮುಂದೂಡಿತು.

ನೋಟಿಸ್‌ ಏನು?:

‘ಕೇತಗಾನಹಳ್ಳಿ ಸರ್ವೇ ನಂಬರ್‌ 7 ಮತ್ತು 8ರಲ್ಲಿ ಪೋಡಿ ದುರಸ್ತಿಯಾಗದ ಜಮೀನಿನಲ್ಲಿ ನೀವು ಅನಧಿಕೃತವಾಗಿ ಒತ್ತುವರಿ ಮಾಡಿ ಸ್ವಾಧೀನಾನುಭವ ಹೊಂದಿದ್ದೀರಿ. ಹಾಗಾಗಿ, ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 94ರ ಅಡಿಯಲ್ಲಿ ಏಕೆ ನಿಮ್ಮಿಂದ ದಂಡ ವಸೂಲಿ ಮಾಡಬಾರದು ಎಂಬುದಕ್ಕೆ ಸಮಜಾಯಿಷಿ ನೀಡಿ. ಈ ಕುರಿತಂತೆ ನಿಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸಿ. ಇಲ್ಲವಾದಲ್ಲಿ ಕಾನೂನು ರೀತ್ಯಾ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ರಾಮನಗರ ತಾಲ್ಲೂಕು ತಹಶೀಲ್ದಾರ್‌ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಇದೇ 18ರಂದು ಒತ್ತುವರಿ ತೆರವು ನೋಟಿಸ್‌ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.