ADVERTISEMENT

ಸರ್ಕಾರಿ ಭೂಮಿ ಒತ್ತುವರಿ| ಎಚ್‌ಡಿಕೆ ವಿರುದ್ಧದ ಆರೋಪ: ಸಿಎಸ್ ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 1:55 IST
Last Updated 10 ಮಾರ್ಚ್ 2023, 1:55 IST
   

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಅವರ ಸಂಬಂಧಿ ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಅವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಕಾರ್ಯದರ್ಶಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಮಾನ್ಯ ಮಾಡಲು ನ್ಯಾಯಪೀಠ ನಿರಾಕರಿಸಿತು.

ADVERTISEMENT

‘ಭೂ ಕಬಳಿಕೆ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಗೆ ಲೋಕಾಯುಕ್ತ 2014ರಲ್ಲಿಯೇ ಆದೇಶಿಸಿದೆ. ಆದರೆ, ಸರ್ಕಾರ ಜಮೀನು ವಶಕ್ಕೆ ಪಡೆಯವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಇದೇ 15ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಾಗಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿತು.

ಪ್ರಕರಣವೇನು?: ‘ಎಚ್.ಡಿ. ಕುಮಾರ ಸ್ವಾಮಿ ಹಾಗೂ ಅವರ ಸಂಬಂಧಿಗಳು ರಾಮನಗರ ಜಿಲ್ಲೆ ಬಿಡದಿ ಹೋಬಳಿ ಕೇತಗಾನಹಳ್ಳಿಯ ವಿವಿಧ ಸರ್ವೆ ನಂಬರ್‌ಗಳಲ್ಲಿ 14 ಎಕರೆಗೂ ಹೆಚ್ಚು ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ’ ಎಂದು ಮಾಜಿ ಸಂಸದ ದಿವಂಗತ ಜಿ. ಮಾದೇಗೌಡ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

‘ಈ ದೂರಿನ ಬಗ್ಗೆ ತನಿಖೆ ನಡೆಸಬೇಕು’ ಎಂದು ಲೋಕಾಯುಕ್ತರು ಕಂದಾಯ ಇಲಾಖೆಗೆ 2014ರಲ್ಲಿ ಆದೇಶಿಸಿದ್ದರು. ಈ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಆದರೆ, ‘ಹೈಕೋರ್ಟ್ ಆದೇಶವನ್ನು ಇನ್ನೂ ಪಾಲನೆ ಮಾಡಿಲ್ಲ’ ಎಂದು ಆರೋಪಿಸಿ ಈ ಅರ್ಜಿ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.