ADVERTISEMENT

ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

ಕೃಷಿ ಸಂಬಂಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಬಂದ್‌ಗೆ ಕರೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 8:18 IST
Last Updated 27 ಸೆಪ್ಟೆಂಬರ್ 2020, 8:18 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಕೃಷಿ ಸಂಬಂಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಸೋಮವಾರದ ಬಂದ್‌ಗೆ ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಬೆಂಬಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಭಾನುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ನಿರಂತರ ಕೆಲಸ ಮಾಡುತ್ತಿದೆ. ರೈತರ ಒಳಿತಿಗಾಗಿಯೇ ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿದೆ. ಈ ವಿಷಯವನ್ನು ರೈತ ಸಂಘಟನೆಗಳ ಮುಖಂಡರಿಗೂ ಮನವರಿಕೆ ಮಾಡಲಾಗಿದೆ. ಈ ಬಂದ್‌ಗೆ ನಮ್ಮ ಬೆಂಬಲ ಇಲ್ಲ’ ಎಂದರು.

ರೈತರು ತಮ್ಮ ಉತ್ಪನ್ನಗಳಿಗೆ ಒಳ್ಳೆಯ ಬೆಲೆ ಪಡೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕೃಷಿ ಉತ್ಪನ್ನ ಮಾರುಟ್ಟೆ ವ್ಯವಹಾರ ನಿಯಂತ್ರಣ (ಎಪಿಎಂಸಿ) ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಎಲ್ಲ ವಿಚಾರಗಳನ್ನೂ ರೈತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.

ADVERTISEMENT

ಬಲವಂತ ಮಾಡಿದರೆ ಕ್ರಮ

ಕಂದಾಯ ಸಚಿವ ಆರ್‌. ಅಶೋಕ ಮಾತನಾಡಿ, ‘ಸೋಮವಾರದ ಬಂದ್‌ ಕರೆಯನ್ನು ಸರ್ಕಾರ ಬೆಂಬಲಿಸುವುದಿಲ್ಲ. ಬಂದ್‌ ವಿಚಾರದಲ್ಲಿ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ಗಳು ನೀಡಿರುವ ನಿರ್ದೇಶನಗಳನ್ನು ನಾವು ಪಾಲಿಸುತ್ತೇವೆ’ ಎಂದರು.

ಸೋಮವಾರ ಎಂದಿನಂತೆ ಎಲ್ಲ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಅಂಗಡಿ ಮುಂಗಟ್ಟುಗಳು ತೆರೆದಿರಲಿವೆ. ಸಾರ್ವಜನಿಕ ಸಾರಿಗೆಯಲ್ಲೂ ವ್ಯತ್ಯಯ ಇಲ್ಲ. ಜನಜೀವನ ಎಂದಿನಂತೆಯೇ ಇರಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಯಾರಾದರೂ ಬಲವಂತದ ಬಂದ್‌ಗೆ ಯತ್ನಿಸಿದರೆ ಅಂತಹವರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.