ADVERTISEMENT

ಮೀಸಲಾತಿ ನಿಗದಿಗೆ ಸಮಿತಿ: ಸಚಿವ ಎಂ.ಟಿ.ಬಿ.ನಾಗರಾಜು

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2022, 16:23 IST
Last Updated 22 ಮಾರ್ಚ್ 2022, 16:23 IST

ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಯಲ್ಲಿನ ತೊಡಕುಗಳ ನಿವಾರಣೆಗೆ ಸಮಿತಿಯೊಂದನ್ನು ನೇಮಿಸಲಾಗುವುದು ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜು ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್‌ ಕೆ. ರಾಥೋಡ್‌ ಮತ್ತು ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದ ಅವರು, ‘ಈಗಾಗಲೇ ಚುನಾವಣೆ ನಡೆದಿರುವ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಕೆಲವು ಪ್ರಕರಣಗಳಿವೆ. ಆದರೆ, ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ಆದೇಶದಿಂದ ಈಗ ಮೀಸಲಾತಿ ನಿಗದಿಗೆ ತೊಡಕಾಗಿದೆ’ ಎಂದರು.

ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಮುನ್ನ ಕೆಲವು ಪ್ರಕ್ರಿಯೆ ನಡೆಸುವಂತೆ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿನ ಚುನಾವಣೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್‌ ಆದೇಶಿಸಿದೆ. ಅದನ್ನು ಪಾಲಿಸಲು ಸರ್ಕಾರ ಸಿದ್ಧತೆ ನಡೆಸಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯಲ್ಲೂ ಕಾನೂನು ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಮೀಸಲಾತಿಯ ವಿಚಾರದಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಸರ್ಕಾರ ಎಚ್ಚರ ವಹಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ತಜ್ಞರ ಜತೆ ಸಮಾಲೋಚಿಸಿ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಪಟ್ಟಿ ಪ್ರಕಟಿಸಲಾಗುವುದು’ ಎಂದು ಭರವಸೆ
ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.