ADVERTISEMENT

ಚಂದ್ರಬಾಬು ನಾಯ್ಡು– ದೇವೇಗೌಡ ಭೇಟಿ ಗುರುವಾರ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2018, 19:59 IST
Last Updated 7 ನವೆಂಬರ್ 2018, 19:59 IST

ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರೋಧಿ ಪಕ್ಷಗಳ ‘ಮಹಾಮೈತ್ರಿ’ ರಚಿಸುವ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌– ಜೆಡಿಎಸ್‌ ಮಿತ್ರಪಕ್ಷಗಳು ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಈ ಸಾಧನೆಯನ್ನು ಅಭಿನಂದಿಸುವುದರ ಜತೆಗೆ, ‘ಮಹಾಮೈತ್ರಿ’ಯ ಕುರಿತು ಸುದೀರ್ಘ ಚರ್ಚೆ ನಡೆಸುವರು.

ಮಧ್ಯಾಹ್ನ 3.30 ಕ್ಕೆ ಅವರು ಅಮೋಘ್ ರೆಸಿಡೆನ್ಸಿಯಲ್ಲಿ ಇಬ್ಬರು ನಾಯಕರ ಭೇಟಿ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೂಡ ಹಾಜರಿರುತ್ತಾರೆ.

ADVERTISEMENT

ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್‌ ನೀಡಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಚಂದ್ರಬಾಬು ನಾಯ್ಡು ಎನ್‌ಡಿಎ ಮೈತ್ರಿ ಕಡಿದು ಹೊರಬಂದರು. ತೆಲಂಗಾಣದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ವಿರೋಧಿ ಪಕ್ಷಗಳನ್ನು ಸಂಘಟಿಸುವ ಕಾರ್ಯದಲ್ಲಿ ಅವರು ಮುಂಚೂಣಿಯಲ್ಲಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸೋಲಿಸಲು ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.