ADVERTISEMENT

ಜಿ.ಪಂ–ತಾ.ಪಂ ಮೀಸಲು: ಹೈಕೋರ್ಟ್‌ಗೆ ಮತ್ತೆ ಕಾಲಾವಕಾಶ ಕೋರಿಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2024, 16:15 IST
Last Updated 5 ಸೆಪ್ಟೆಂಬರ್ 2024, 16:15 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ರಾಜ್ಯದ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಪುನಃ ಮೂರು ವಾರಗಳ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಸಂಬಂಧದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ನ್ಯಾಯಮೂರ್ತಿ ವಿ.ಕಾಮೇಶ್ವರ್ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ  ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ, ‘ಎಲ್ಲಾ 31 ಜಿಲ್ಲೆಗಳಲ್ಲಿ ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳ ಪುನರ್‌ವಿಂಗಡಣೆ ಕಾರ್ಯ ಮುಗಿದಿದೆ. ಈಗ ಮೀಸಲಾತಿ ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ ಮೂರು ವಾರಗಳ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ADVERTISEMENT

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು. ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹಾಗೂ ಅರ್ಜಿದಾರರ ಪರ ಎ.ಮೊಹಮ್ಮದ್ ತಾಹಿರ್ ಹಾಜರಿದ್ದರು.

ಪ್ರಕರಣವೇನು?:

‘ಜಿ.ಪಂ ಹಾಗೂ ತಾ.ಪಂ ಕ್ಷೇತ್ರಗಳಿಗೆ 12 ವಾರಗಳಲ್ಲಿ ಮೀಸಲಾತಿ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ 2023ರ ಡಿಸೆಂಬರ್ 19ರಂದು ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಆದರೆ, ಈ ಭರವಸೆಯನ್ನು ಸರ್ಕಾರ ಪಾಲಿಸಿಲ್ಲ’ ಎಂದು ರಾಜ್ಯ ಚುನಾವಣಾ ಆಯೋಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಅಂತೆಯೇ, ‘ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ‘ ಎಂದು ದೂರಿ 2023ರಲ್ಲಿ ಮತ್ತೊಂದು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.