ADVERTISEMENT

ಜಿ.ಪಂ, ತಾ.ಪಂ: ಮೀಸಲು ನಿಗದಿಗೆ 12 ವಾರ ಗಡುವು ನೀಡಿದ ಹೈಕೋರ್ಟ್

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 19:30 IST
Last Updated 24 ಮೇ 2022, 19:30 IST
   

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿದ್ದು ಹೆಚ್ಚಿನ ಕಾಲಾವಕಾಶ ಕೇಳದಂತೆ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ತಾಕೀತು ಮಾಡಿದೆ.

ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯ ಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ಮೀಸಲಾತಿ ನಿಗದಿಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ಜ್ಞಾಪನಾ ಪತ್ರ (ಮೆಮೊ) ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ‘ಕ್ಷೇತ್ರ ಮತ್ತು ಮೀಸಲು ನಿಗದಿಗೆ 8ರಿಂದ 12 ವಾರಗಳ ಕಾಲ ಸಾಕು. ರಾಜ್ಯ ಸರ್ಕಾರ ಮತ್ತೆ ಮತ್ತೆ ಹೆಚ್ಚಿನ ಸಮಯ ಕೇಳುವಂತಾಗಬಾರದು’ ಎಂದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ 12 ವಾರಗಳ ಗಡುವು ವಿಧಿಸಿ ವಿಚಾರಣೆ ಮುಂದೂಡಿದೆ.ಕಳೆದ ವಿಚಾರಣೆ ವೇಳೆಯಲ್ಲಿ ಆಯೋಗವು, ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದೆ’ ಎಂದು ಕಳವಳವ್ಯಕ್ತಪಡಿಸಿತ್ತು.

ಆಯೋಗ ರಚನೆ ಪ್ರಶ್ನೆ:ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಕೂಡಾಪ್ರಕಟಿಸಲಾಗಿತ್ತು.

ಚುನಾವಣೆಗೆ ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು.ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.