ADVERTISEMENT

ಗ್ರಾ.ಪಂ. ಚುನಾವಣೆ: ರಾಜಕೀಯ ಹಸ್ತಕ್ಷೇಪಕ್ಕೆ ಆಯೋಗ ಗರಂ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 19:45 IST
Last Updated 13 ಡಿಸೆಂಬರ್ 2020, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಇದೇ 22 ಮತ್ತು 27ರಂದು ಎರಡು ಹಂತಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಈ ಸಾರ್ವತ್ರಿಕ ಚುನಾವಣೆ ಪಕ್ಷ ರಹಿತವಾಗಿ ನಡೆಯಲಿದೆ. ಹೀಗಾಗಿ, ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್‌ಗಳ ಮೂಲಕ ಅಭ್ಯರ್ಥಿಗಳು ಪ್ರಚಾರ ಮಾಡಬಾರದು. ಈ ನಿಯಮ ಉಲ್ಲಂಘಿಸಿದರೆ, ಅಂಥ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತಗಳಿಗೆ ಆಯೋಗ ಸ್ಪಷ್ಟ ಸೂಚನೆ ನೀಡಿದೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಸತ್ ಸಂಪ್ರದಾಯಗಳನ್ನು ಗಾಳಿಗೆ ತೂರಿ ಪಕ್ಷದ ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಿ, ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜಕೀಯಗೊಳಿಸುತ್ತಿರುವ ಬಗ್ಗೆ ಆಯೋಗ ಗರಂ ಆಗಿದೆ.

ADVERTISEMENT

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಕಾಯ್ದೆ 1992 ಸೆಕ್ಷನ್‌ 7(2) ರಂತೆ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷ ರಹಿತವಾಗಿ ನಡೆಸಬೇಕಿದೆ. ಅಲ್ಲದೆ, ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆ ಮಾತ್ರ ಹಂಚಲಾಗುತ್ತದೆ. ಈ ಕಾರಣದಿಂದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅಭ್ಯರ್ಥಿಗಳಿಗೆ ಕಾನೂನು ಉಲ್ಲಂಘಿಸದಂತೆ ಸೂಚನೆ ನೀಡಿರುವ ಆಯೋಗ, ಈ ಬಗ್ಗೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆ ಮೇಲೆ ಪಕ್ಷ ಬಾವುಟ, ಬ್ಯಾನರ್‌ಗಳನ್ನು ಬಳಸಬಾರದು. ಸ್ಪರ್ಧಿಸುವ ಅಭ್ಯರ್ಥಿಗಳನ್ನು ಯಾವುದೇ ರಾಷ್ಟ್ರೀಯ, ರಾಜ್ಯ, ಸ್ಥಳೀಯ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಪರವಾಗಿ ಮತ ನೀಡುವಂತೆ ಮತದಾರರನ್ನು ಕೋರಬಾರದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು, ಹಂಚುವುದು ಮಾಡಬಾರದು. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷದ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡಬಾರದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.