
ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ 1,200 ಚದರ ಅಡಿ ವಿಸ್ತೀರ್ಣದ ಒಳಗಿನ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ.
ನೆಲ +2 ಅಂತಸ್ತು ಅಥವಾ ಸ್ಟಿಲ್ಟ್+3 ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ನಿರ್ದೇಶಕರು ಬುಧವಾರ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೆ, ಇನ್ನು ಮುಂದೆ ನಿರ್ಮಾಣವಾಗಲಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಪಡೆಯುವುದು ಸುಲಭವಾಗಲಿದೆ.
ಡಿಸೆಂಬರ್ 12ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಕಾರ ಆದೇಶ ಹೊರಡಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ಕಟ್ಟಡಗಳ ನಿರ್ಮಾಣದ ಮೇಲೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ನಿಯಂತ್ರಣ) ಮಾದರಿ ಉಪ ವಿಧಿಗಳು 2015ಕ್ಕೆ ತಿದ್ದುಪಡಿ ತರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.