ADVERTISEMENT

ಗ್ರಾಮ ಪಂಚಾಯಿತಿ ಚುನಾವಣೆ: 21 ಜಿಲ್ಲೆಗಳ ಮೀಸಲಾತಿ ಪಟ್ಟಿ ಸಿದ್ಧ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 22:15 IST
Last Updated 5 ಆಗಸ್ಟ್ 2020, 22:15 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬರಲಿರುವಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದ 21 ಜಿಲ್ಲೆಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಬುಧವಾರ ಸಲ್ಲಿಸಿದೆ. ಉಳಿದ 9 ಜಿಲ್ಲೆಗಳ ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಆ.24ರವರೆಗೂ ಅಲ್ಲಿನ ಜಿಲ್ಲಾಧಿಕಾರಿಗಳು ಸಮಯ ಕೇಳಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

‘ಗ್ರಾಮ ಪಂಚಾಯಿತಿ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿ ಮೇ 28ರಂದು ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಗೆ ಸಾಂವಿಧಾನಿಕ ಸಿಂಧುತ್ವ ಇಲ್ಲ’ ಎಂದು ಆಕ್ಷೇಪಿಸಿ ವಿಧಾನ ಪರಿಷತ್ತಿನ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಸೆಪ್ಟೆಂಬರ್ ಮೊದಲ ವಾರದಲ್ಲಿಮತದಾರರ ಪಟ್ಟಿ ಸಿದ್ಧವಾಗಲಿವೆ’ ಎಂದು ಆಯೋಗ ತಿಳಿಸಿತು. ‘ಮೀಸಲಾತಿ ಪಟ್ಟಿ ಸಿದ್ಧ ಇರುವ 21 ಜಿಲ್ಲೆಗಳ ಚುನಾವಣೆಯನ್ನು ಮೊದಲ ಹಂತದಲ್ಲಿ ನಡೆಸಲು ವೇಳಾಪಟ್ಟಿ ಘೋಷಣೆ ಮಾಡಲು ಆಯೋಗಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.

ADVERTISEMENT

‘ಹಂತ ಹಂತವಾಗಿ ಚುನಾವಣಾ ದಿನಾಂಕ ಘೋಷಣೆ ಮಾಡಲು ಆಗುವುದಿಲ್ಲ’ ಎಂದು ಆಯೋಗದ ಪರ ವಕೀಲರು ತಿಳಿಸಿದರು. ವಿಚಾರಣೆಯನ್ನು ಆಗಸ್ಟ್ 27ಕ್ಕೆ ಪೀಠ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.