ADVERTISEMENT

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನಕ್ಕೆ ಆಗ್ರಹ

ಗ್ರಾಮ ಪಂಚಾಯಿತಿ ನೌಕರರ ರಾಜ್ಯ ಸಮ್ಮೇಳನ ಆರಂಭ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2018, 18:44 IST
Last Updated 27 ಅಕ್ಟೋಬರ್ 2018, 18:44 IST

ಮೈಸೂರು: ಗ್ರಾಮ ಪಂಚಾಯಿತಿ ನೌಕರರಿಗೆ ನಿಗದಿ ಮಾಡಿರುವ ಕನಿಷ್ಠ ವೇತನವನ್ನು ಸರ್ಕಾರ ನೀಡದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಯಲಿದೆ ಎಂದು ಸಿಐಟಿಯು ರಾಜ್ಯ ಸಮಿತಿ ಉಪಾಧ್ಯಕ್ಷ ವಿ.ಜೆ.ಕೆ.ನಾಯರ್ ಶನಿವಾರ ಎಚ್ಚರಿಸಿದರು.

ಸಿಐಟಿಯು ನೇತೃತ್ವದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ 7ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮೂರು ದಿನ ನಡೆಯುವ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ಸಾವಿರಕ್ಕೂ ಅಧಿಕ ನೌಕರರು ಪಾಲ್ಗೊಂಡಿದ್ದಾರೆ.

ಕೇರಳ, ಪಶ್ಚಿಮ ಬಂಗಾಳ, ತ್ರಿಪುರಾದಲ್ಲಿ ಗ್ರಾಮ ಪಂಚಾಯಿತಿ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲಾಗಿದೆ. ರಾಜ್ಯದಲ್ಲೂ ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಚಳವಳಿ ನಡೆಸಬೇಕಿದೆ ಎಂದು ಹೇಳಿದರು.

ADVERTISEMENT

ಸಿಐಟಿಯು ರಾಜ್ಯ ಸಮಿತಿ ಅಧ್ಯಕ್ಷೆ ಎಸ್.ವರಲಕ್ಷ್ಮಿ, ರಾಜ್ಯದ 6,204 ಗ್ರಾಮ ಪಂಚಾಯಿತಿಗಳಲ್ಲಿ 60 ಸಾವಿರದಷ್ಟು ನೌಕರರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕನಿಷ್ಠ ವೇತನ ಪಾವತಿಸಲು ಸರ್ಕಾರ ₹ 820 ಕೋಟಿ ಬಿಡುಗಡೆ ಮಾಡಬೇಕಿದೆ. ಆದರೆ ಇದುವರೆಗೆ ಕೇವಲ ₹ 520 ಕೋಟಿ ಮಾತ್ರ ಬಿಡುಗಡೆಯಾಗಿದೆ ಎಂದರು.

ಕೆಲವು ಪಂಚಾಯಿತಿಗಳಲ್ಲಿ ನೌಕರರಿಗೆ 10–12 ತಿಂಗಳುಗಳಿಂದ ವೇತನ ನೀಡಿಲ್ಲ. ಆದರೂ ಗ್ರಾಮೀಣ ಪ್ರದೇಶದ ಜನರ ಸೇವೆ ಮಾಡುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.