ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಸುಳ್ಳು ಆರೋಪ, ಅಪಪ್ರಚಾರ ಮಾಡಿದರು. ಆದರೆ ಯಾವ ಕಾರಣಕ್ಕೂ ಯಾವ ಕಾರ್ಯಕ್ರಮವನ್ನೂ ನಿಲ್ಲಿಸುವುದಿಲ್ಲ ಸಿಎಂ ಸಿದ್ದರಾಮಯ್ಯ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಭಾಷಣದ ವಿಡಿಯೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಅಭಿವೃದ್ಧಿ ಯೋಜನೆಗಳಿಗೂ ಹಣ ಮೀಸಲಿಟ್ಟು, ಗ್ಯಾರಂಟಿಗಳ ಜೊತೆಗೆ ಕರ್ನಾಟಕದ ಪ್ರಗತಿಯನ್ನೂ ಮಾಡಿದ್ದೇವೆ. 1.26 ಕೋಟಿ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ತಿಳಿಸಿದ್ದಾರೆ.
'ನೀವು (ಪ್ರತಿಪಕ್ಷ) ಎಷ್ಟೇ ಸುಳ್ಳು ಹೇಳಿದರೂ ಉಪಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಸೋತಿದ್ದೀರಿ. ಜನರನ್ನು ಪ್ರತಿ ಬಾರಿ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಅದು ಸಾಧ್ಯವಿಲ್ಲ' ಎಂದು ಕಿಡಿಕಾರಿದರು.
2023ರ ಜೂನ್ 11ರಿಂದ ಈವರೆಗೆ 410 ಕೋಟಿ ಬಾರಿ ಮಹಿಳೆಯರು ಶಕ್ತಿ ಯೋಜನೆಯಡಿ ಓಡಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ಬರೋಬ್ಬರಿ ₹76,509 ಕೋಟಿ ಖರ್ಚು ಮಾಡಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದ್ದರೆ ₹76,509 ಕೋಟಿ ಕೊಡಲು ಸಾಧ್ಯವಿತ್ತೇ?. ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಬಿಡುತ್ತೆ ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತಾ? ರಾಜ್ಯದ ಜನರನ್ನು ಯಾವಾಗಲೂ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯವರು ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದೇವೆ ಎಂದು ಪೋಸ್ಟ್‌ನಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.