ADVERTISEMENT

ಚಾಮರಾಜನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಗುಂಡ್ಲುಪೇಟೆ: ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಖಂಡನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 18:44 IST
Last Updated 25 ಜೂನ್ 2019, 18:44 IST
ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು
ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬೆಕಟ್ಟೆಯಲ್ಲಿ ನಡೆದ ದಲಿತ ಯುವಕನ ಬೆತ್ತಲೆ ಮೆರವಣಿಗೆ ಮತ್ತು ಸಂತೇಮರಹಳ್ಳಿಯಲ್ಲಿ 2015ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ, ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಮಂಗಳವಾರ ಕರೆ ನೀಡಿದ್ದ ಚಾಮರಾಜನಗರ ಬಂದ್‌ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ವರ್ತಕರು ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದರು. ಟ್ಯಾಕ್ಸಿ, ಆಟೊ ಚಾಲಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದರಿಂದ ವಾಹನ ಸಂಚಾರ ವಿರಳವಾಗಿತ್ತು.

ಬೆಳಿಗ್ಗೆ ಶಾಲೆಗಳು ಹಾಗೂ ಬ್ಯಾಂಕುಗಳು ಕಾರ್ಯಾರಂಭ ಮಾಡಿದ್ದವು. ಒಕ್ಕೂಟದ ಪ್ರತಿನಿಧಿಗಳು ಮನವಿ ಮಾಡಿದ ನಂತರ ಶಾಲೆಗಳಿಗೆ ರಜೆ ಘೋಷಿಸಲಾಯಿತು. ಬ್ಯಾಂಕುಗಳೂ ವಹಿವಾಟು ನಡೆಸಲಿಲ್ಲ.

ADVERTISEMENT

ಬೃಹತ್‌ ಮೆರವಣಿಗೆ: ಜಿಲ್ಲೆ ಹಾಗೂ ಹೊರಜಿಲ್ಲೆಗಳಿಂದ ಬಂದಿದ್ದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಮಾನವೀಯ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಎರಡೂ ಪ್ರಕರಣಗಳಲ್ಲಿ ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ದೂರಿದರು. ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.