ADVERTISEMENT

ಗುರು ರಾಘವೇಂದ್ರ ಬ್ಯಾಂಕ್ ಅಕ್ರಮ: ಎಸ್‌ಐಟಿಗೆ?

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 15:57 IST
Last Updated 24 ಏಪ್ರಿಲ್ 2024, 15:57 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ‘ಲೋಕಸಭೆ ಚುನಾವಣೆ ಬಳಿಕ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ (ಎಸ್​​ಐಟಿ) ವಹಿಸುವ ಬಗ್ಗೆ ನಿರ್ಧರಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.‌

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಸಿಬಿಐ ತನಿಖೆಯಿಂದ ಸಂತ್ರಸ್ತರಿಗೆ ನ್ಯಾಯ ಸಿಗದಿದ್ದರೆ ರಾಜ್ಯ ಸರ್ಕಾರವೇ ಎಸ್‌ಐಟಿ ರಚಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಮುಖ್ಯಮಂತ್ರಿಗೆ ಪ್ರಿಯಾಂಕಾ ಗಾಂಧಿ ಸೂಚಿಸಿದ್ದಾರೆ. ಈ ವಿಚಾರವಾಗಿ ನನಗೂ ಅವರು ನಿರ್ದೇಶನ ನೀಡಿದ್ದಾರೆ. ಚುನಾವಣೆ ನಂತರ ಈ ಬಗ್ಗೆ ತೀರ್ಮಾನಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗುವುದು’ ಎಂದರು.

‘ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಮತ್ತು ಸಂತ್ರಸ್ತರ ಪರವಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರ ನಿಯೋಗವು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದೆ. ನ್ಯಾಯ ಕೊಡಿಸುವ ನಿಟ್ಟಿನಲ್ಲಿ ತಮ್ಮ ಪರವಾಗಿ ಧ್ವನಿ ಎತ್ತುವಂತೆ ನಿಯೋಗವು ಮನವಿ ಮಾಡಿದೆ. ಅದಕ್ಕೆ ಸ್ಪಂದಿಸಿದ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿಗೆ  ಪತ್ರ ಬರೆದು ಎಸ್​​ಐಟಿ ರಚಿಸುವಂತೆ ಸಲಹೆ ನೀಡುವುದಾಗಿ ತಿಳಿಸಿದ್ದಾರೆ’ ಎಂದರು.

ADVERTISEMENT

‘ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಮತ್ತು ವಸಿಷ್ಠ ಸಹಕಾರಿ ಬ್ಯಾಂಕಿನ 3 ಲಕ್ಷ ಠೇವಣಿದಾರರು ಮೋಸ ಹೋಗಿದ್ದು, 200ಕ್ಕೂ ಹೆಚ್ಚು ಸಂತ್ರಸ್ತರು ಮೃತಪಟ್ಟಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂತ್ರಸ್ತರು ಈ ವಿಚಾರವಾಗಿ ಹೋರಾಟ ಮಾಡಿದ್ದರು. ಆಗ ಈ ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಭರವಸೆ ನೀಡಿದರಾದರೂ ಸಿಬಿಐ ತನಿಖೆಗೆ ಆದೇಶ ನೀಡಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ತೀರ್ಮಾನಿಸಿದೆ. ಸಿಬಿಐಗೆ ಕೊಟ್ಟರೂ ಕೂಡ ಈ ಹಗರಣದಲ್ಲಿ ಬಿಜೆಪಿ ನಾಯಕರೇ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ಹೀಗಾಗಿ, ಪ್ರಕರಣದ ತನಿಖೆಯನ್ನು ಕೈಗೊಂಡಿಲ್ಲ. ಇದರಿಂದಾಗಿ ಲಕ್ಷಾಂತರ ಠೇವಣಿದಾರರು ಬೀದಿಗೆ ಬಿದ್ದಿದ್ದಾರೆ. ಅವರಿಗೆ ನ್ಯಾಯ ಸಿಗಬೇಕಿದೆ’ ಎಂದು ಶಿವಕುಮಾರ್ ಹೇಳಿದರು.

ಗುರು ರಾಘವೇಂದ್ರ ಬ್ಯಾಂಕ್‌ ಸಂತ್ರಸ್ತರ ಪರವಾಗಿ ಹೋರಾಟ ನಡೆಸುತ್ತಿರುವ ನಿಯೋಗ ಶಂಕರ್ ಗುಹಾ ನೇತೃತ್ವದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಜೊತೆ ‌ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.