ADVERTISEMENT

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಹಗರಣ: ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಹಗರಣ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 16:11 IST
Last Updated 28 ಮಾರ್ಚ್ 2023, 16:11 IST
   

ಬೆಂಗಳೂರು: ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ, ₹ 800 ಕೋಟಿಗೂ ಹೆಚ್ಚು ವಂಚಿಸಿರುವ ಆರೋಪ ಎದುರಿಸುತ್ತಿರುವ ನಗರದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರು ಮತ್ತು ಸುಸ್ತಿದಾರರಿಗೆ ಸೇರಿದ ₹ 114.19 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಗ್ರಾಹಕರಿಗೆ ವಂಚಿಸಿರುವ ಆರೋಪದ ಮೇಲೆ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರು ಹಾಗೂ ಸುಸ್ತಿದಾರರ ವಿರುದ್ಧ ನಗರ ಪೊಲೀಸರು ತನಿಖೆ ನಡೆಸಿದ್ದರು. ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿ ಆಧಾರದಲ್ಲಿ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (‍ಪಿಎಂಎಲ್‌ಎ) ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದ ತನಿಖೆಯ ವೇಳೆ ಲಭಿಸಿರುವ ಸಾಕ್ಷ್ಯಗಳನ್ನು ಆಧರಿಸಿ ಬ್ಯಾಂಕ್‌ ಆಡಳಿತ ಮಂಡಳಿ ಸದಸ್ಯರು ಹಾಗೂ ಸುಸ್ತಿದಾರರಿಗೆ ಸೇರಿದ 21 ಸ್ಥಿರಾಸ್ತಿಗಳು ಮತ್ತು ₹ 3.15 ಕೋಟಿ ಮೊತ್ತದ ಬ್ಯಾಂಕ್‌ ಠೇವಣಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ತಿಳಿಸಿದೆ.

ಈ ಪ್ರಕರಣದ ಆರೋಪಿಗಳಿಗೆ ಸೇರಿದ ₹ 45.33 ಕೋಟಿ ಮೌಲ್ಯದ ಆಸ್ತಿಗಳನ್ನು ಇ.ಡಿ ಹಿಂದೆ ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಖಾಲಿ ಜಮೀನು, ಮನೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳು ಹಾಗೂ ಬ್ಯಾಂಕ್‌ ಠೇವಣಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ₹ 159.52 ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ADVERTISEMENT

ಸುಸ್ತಿದಾರರು, ಬ್ಯಾಂಕ್‌ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ಶಾಮೀಲಾಗಿ ಸಂಚು ರೂಪಿಸಿ ಬ್ಯಾಂಕ್‌ನ ಹಣವನ್ನು ಲಪಟಾಯಿಸಿದ್ದರು. ಸರಿಯಾದ ಆಧಾರಗಳಿಲ್ಲದೇ ಬೃಹತ್‌ ಮೊತ್ತದ ಸಾಲಗಳನ್ನು ಮಂಜೂರು ಮಾಡಿ, ಬಿಡುಗಡೆ ಮಾಡಲಾಗಿತ್ತು. ನಕಲಿ ಠೇವಣಿ ದಾಖಲೆಗಳನ್ನು ಸೃಷ್ಟಿಸಿ ಬೃಹತ್‌ ಮೊತ್ತದ ಹಣ ವರ್ಗಾವಣೆ ಮಾಡಲಾಗಿತ್ತು. ಬೃಹತ್‌ ಮೊತ್ತದ ಸಾಲ ಪಡೆದವರು ಅದನ್ನು ಮರುಪಾವತಿ ಮಾಡದೇ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ದಾಖಲೆಗಳನ್ನು ಬಳಸಿ ಕೆಲವು ಸಾಲದ ಖಾತೆಗಳನ್ನು ಸೃಷ್ಟಿಸಿ, ಮಂಜೂರಾತಿ ನೀಡಲಾಗಿತ್ತು. ಅದನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ, ಪುನಃ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಬ್ಯಾಂಕ್‌ ಆರ್ಥಿಕವಾಗಿ ಸುಸ್ಥಿತಿಯಲ್ಲಿದೆ ಎಂಬುದನ್ನು ಬಿಂಬಿಸಲು ಈ ರೀತಿ ಮಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.