ಬೆಂಗಳೂರು: ‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ತೆರೆದ ವ್ಯಾಯಾಮ ಶಾಲೆ, ಕಸ ವಿಲೇವಾರಿ ಘಟಕ ತೆರೆಯಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಜತೆ ಚಿಂತನ–ಮಂಥನದಲ್ಲಿ ಅವರು ನಿರ್ಣಯಗಳನ್ನು ಮಂಡಿಸಿದರು.
‘ಗ್ರಾಮ ಸಭೆ, ಸ್ಥಾಯಿ ಸಮಿತಿ ಸಭೆಗಳನ್ನು ನಿರ್ದಿಷ್ಟ ಸಮಯದಲ್ಲಿ ನಡೆಸುತ್ತೇವೆ. ಕೆಡಿಪಿ ಸಭೆಯನ್ನು ವರ್ಷದಲ್ಲಿ ನಾಲ್ಕು ಬಾರಿ ಕಡ್ಡಾಯವಾಗಿ ನಡೆಸುತ್ತೇವೆ. ತೆರಿಗೆಗಳನ್ನು ಕಾಲಕಾಲಕ್ಕೆ ಪರಿಷ್ಕರಿಸಿ ಶೇ 100ರಷ್ಟು ವಸೂಲಿ ಮಾಡುತ್ತೇವೆ. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂಬ ನಿರ್ಣಯಗಳನ್ನು ಓದಿದರು.
‘ಸಂಸತ್, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ಸುಲಭ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ಆದರೂ ಗೆದ್ದು ಬಂದಿದ್ದೀರಿ, ಒಳ್ಳೆಯ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.