
ನವದೆಹಲಿ: ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲಿ ಗೀಕರಿಸಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ– 2025’ಗೆ ಅಂಕಿತ ಹಾಕಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಪತ್ರ ಬರೆದಿದ್ದಾರೆ.
‘ದ್ವೇಷ ಭಾಷಣ ನಿಯಂತ್ರಣಕ್ಕೆ ಈ ಮಸೂದೆ ತರಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. ಆದರೆ, ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಮಸೂದೆಯಲ್ಲಿ ಅನೇಕ ಲೋಪಗಳಿರುವುದು ಗಮನಕ್ಕೆ ತಂದಿದೆ. ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಸರ್ಕಾರ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಸಂವಿಧಾನದ 19ನೇ ವಿಧಿಯ ಅಡಿಯ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವ ಉದ್ದೇಶವನ್ನು ಈ ಮಸೂದೆ ಹೊಂದಿದೆ’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ಆಡಳಿತ, ಸಾಮಾಜಿಕ ನ್ಯಾಯದ ಬಗ್ಗೆ ಧ್ವನಿ ಎತ್ತುವ ಕನ್ನಡ ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಂಘಟನೆಗಳು, ವಿದ್ಯಾರ್ಥಿಗಳ ಸಂಘಗಳ ಚಟುವಟಿಕೆಗಳನ್ನು ಹತ್ತಿಕ್ಕುವ ಸಾಧ್ಯತೆಯೂ ಇದೆ. ಈ ಮಸೂದೆಗೆ ಈಗಾಗಲೇ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಹೀಗಾಗಿ, ಈ ಮಸೂದೆಯನ್ನು ರಾಷ್ಟ್ರಪತಿ ಅವರ ಪರಿಶೀಲನೆಗೆ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.