ADVERTISEMENT

ಹಾನಗಲ್‌ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 11:26 IST
Last Updated 8 ಜೂನ್ 2021, 11:26 IST
ಸಿ.ಎಂ.ಉದಾಸಿ
ಸಿ.ಎಂ.ಉದಾಸಿ   

ಹಾವೇರಿ: ಮಾಜಿ ಸಚಿವ, ಹಾನಗಲ್‌ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ (85) ಅವರು ಮಂಗಳವಾರ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾದರು.

ವಯೋಸಹಜ ಕಾಯಿಲೆ, ಕಿಡ್ನಿ ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆಗೆ ಕಳೆದ 15 ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಾರದ ಹಿಂದೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಮಂಗಳವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿ, ಮಧ್ಯಾಹ್ನದ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ಅವರಿಗೆ ಪತ್ನಿ ನೀಲಮ್ಮ, ಪುತ್ರ ಸಂಸದ ಶಿವಕುಮಾರ ಉದಾಸಿ, ಪುತ್ರಿ ಜಯಶ್ರೀ ಇದ್ದಾರೆ.

ADVERTISEMENT

ರಾಜಕೀಯ ಜೀವನ: ಹಾನಗಲ್‌ ವಿಧಾನಸಭಾ ಕ್ಷೇತ್ರದಿಂದ 1983ರಿಂದ ನಿರಂತರವಾಗಿ 9 ಬಾರಿ ಸ್ಪರ್ಧಿಸಿ, 6 ಬಾರಿ ಜಯಗಳಿಸಿ, 3 ಬಾರಿ ಪರಾಭವಗೊಂಡಿದ್ದರು. ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ, ನಂತರ ಮೂರು ಬಾರಿ ಜನತಾದಳ, ಒಂದು ಬಾರಿ ಜೆಡಿಯು, ಒಂದು ಬಾರಿ ಕೆಜಿಪಿ ಹಾಗೂ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಹಾನಗಲ್‌ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದರು. ನಂತರ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಸಣ್ಣ ನೀರಾವರಿ ಹಾಗೂ ಜವಳಿ ಖಾತೆಗಳನ್ನು ನಿಭಾಯಿಸಿದ್ದರು. ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಜೆ.ಎಚ್‌. ಪಟೇಲ್‌, ಬಿ.ಎಸ್‌. ಯಡಿಯೂರಪ್ಪ ಅವರ ಸಂಪುಟ ಸಹೋದ್ಯೋಗಿಯಾಗಿ ಕಾರ್ಯ ನಿರ್ವಹಿಸಿದ್ದರು.

2 ವರ್ಷದ ಹಿಂದೆ ಕುಟುಂಬ ಸದಸ್ಯರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದ ಸಿ.ಎಂ ಉದಾಸಿ.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿ.ಎಂ. ಉದಾಸಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್‌ ಮಾರ್ಗಸೂಚಿಯನ್ನು ಪಾಲಿಸಿ ನೆರವೇರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಮುಖ್ಯಮಂತ್ರಿ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

‘ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಉದಾಸಿ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ’ ತಿಳಿಸಿದ್ದಾರೆ.

2 ತಿಂಗಳ ಹಿಂದೆ ಕೊನೆಯ ಬಾರಿಗೆ ಹಾನಗಲ್‌ಗೆ ಬಂದಾಗ ತಮ್ಮ ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್‌ನ ಮನೋಹರ್ ತಹಸೀಲ್ದಾರ್ ಅವರೊಂದಿಗೆ ಉಭಯ ಕುಶಲೋಪರಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.