ADVERTISEMENT

ಭ್ರೂಣಲಿಂಗ ಪತ್ತೆ: ಹೈಕೋರ್ಟ್ ಕಳವಳ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 18:14 IST
Last Updated 25 ಜುಲೈ 2024, 18:14 IST
   

ಬೆಂಗಳೂರು: ‘ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುವ ಮತ್ತು ಗರ್ಭಪಾತಕ್ಕೆ ಪ್ರೇರೇಪಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ’ ಎಂದು ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದೆ.

ಭ್ರೂಣಹತ್ಯೆಗೆ ಪ್ರೇರೇಪಿಸಿದ ಮೂವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಅರ್ಜಿದಾರರು ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಲ್ಲ’ ಎಂದು ಹೇಳಿದೆ.

ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ನಾಗಮಂಗಲ ತಾಲ್ಲೂಕಿನ ದೇವರಮಾವಿನಕೆರೆಯ ಧನಂಜೇಗೌಡ, ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಎ.ಎಲ್.ಸತೀಶ್ ಮತ್ತು ಮೈಸೂರು ತಾಲ್ಲೂಕಿನ ನಾಡನಹಳ್ಳಿ ಪುಟ್ಟರಾಜು ಈ ಅರ್ಜಿ ಸಲ್ಲಿಸಿದ್ದರು.

ADVERTISEMENT

ಆರೋಪ ಏನು?: ಆರೋಪಿಗಳು, ‘ಭ್ರೂಣಗಳ ಆರೋಗ್ಯ ಪರೀಕ್ಷೆಗಾಗಿ ಲ್ಯಾಬ್‌ಗಳಿಗೆ ಬರುವ ಮಹಿಳೆಯರಿಗೆ ಭ್ರೂಣ ಪತ್ತೆಗೆ ಸಂಬಂಧಿಸಿದಂತೆ ಮಾಹಿತಿ ನೀಡುತ್ತಿದ್ದರು. ಬಳಿಕ ಅವರನ್ನು ಭ್ರೂಣಹತ್ಯೆಗೆ ಪ್ರೇರೇಪಿಸುತ್ತಿದ್ದರು. ಇನ್ನಿತರ ಆರೋಪಿಗಳ ಜೊತೆ ಸೇರಿ ಮಂಡ್ಯ ಜಿಲ್ಲೆಯ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ಪರೀಕ್ಷೆ ಮಾಡಿಸಿ ಹೆಣ್ಣು ಮಗು ಎಂದು ಗೊತ್ತಾದರೆ, ಗರ್ಭಪಾತ ಮಾಡಿಸುತ್ತಿದ್ದರು. ಕಮಿಷನ್ ರೂಪದಲ್ಲಿ ಹಣ ಪಡೆದುಕೊಳ್ಳುತ್ತಿದ್ದರು’ ಎಂದು ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.