ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವ
ಮಂಡ್ಯ: ‘ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಂಡ್ಯದ ವಿ.ಸಿ. ಫಾರಂನಲ್ಲಿ ಶನಿವಾರ ನಡೆದ ಕೃಷಿ ಮೇಳದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿ ಇಲ್ಲ. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಶ್ರೀಗಳನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ಬಾಲಗಂಗಾಧರನಾಥ ಸ್ವಾಮೀಜಿ ಸಮಾಜದ ಗೌರವ ಉಳಿಸಲಿಕ್ಕೆ ಬೀದಿಗೆ ಬಂದವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ವಾತ್ಸಲ್ಯವಿತ್ತು’ ಎಂದರು.
‘ನಮ್ಮ ಕಾಲದಲ್ಲಿ ಬಿಡುಗಡೆಯಾದ ಹಣದ ಕಾಮಗಾರಿಗೆ ಟೇಪ್ ಕಟ್ ಮಾಡಲು ಸಿಎಂ ಹಾಸನಕ್ಕೆ ಹೋಗಿದ್ದಾರೆ. ಸರ್ಕಾರ ಜನರ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಕೇಂದ್ರ ಸರ್ಕಾರದ ಮೇಲೆ ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ಎಂ.ಎಸ್.ಪಿ ಬೆಲೆ ನಿಗದಿ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ರಾಜ್ಯ ಸರ್ಕಾರ ಬಗೆಹರಿಸಿಕೊಳ್ಳಲಿ. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ. ಆ ಬಳಿಕ ಕೇಂದ್ರವನ್ನು ಕೇಳಿ. ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯದ ಕರ್ತವ್ಯ’ ಎಂದರು.
‘ಸಿಎಂ, ಡಿಸಿಎಂ ಅವರಿಬ್ಬರೂ ಎಷ್ಟು ಲಕ್ಷ ಬೆಲೆಯ ವಾಚ್ ಕಟ್ಟಿದ್ದಾರೆ ಎನ್ನುವುದು ಮುಖ್ಯವಲ್ಲ. ವಾಚ್ ಅನ್ನು ಹೇಗೆ ಖರೀದಿ ಮಾಡಿದ್ದಾರೆ ಎನ್ನುವುದು ಮುಖ್ಯ. ಅವರ ದುಡಿಮೆ ದುಡ್ಡಿನಲ್ಲಿ ಖರೀದಿ ಮಾಡಿದ್ದಾರಾ ಹೇಗೆ ಎನ್ನುವುದು ಮುಖ್ಯ’ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವರು ಉತ್ತರಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.