
ಎಚ್.ಡಿ.ಕುಮಾರಸ್ವಾಮಿ ಮತ್ತು ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು: ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಇಂದು (ಮಂಗಳವಾರ) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.
‘ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ನಿರ್ವಹಿಸುವ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದಾರೆ. ಸಮಾಜ ಸೇವೆಯಲ್ಲಿ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ನನ್ನ ಮಗ ಮತ್ತು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ. ಕರ್ನಾಟಕ ಮತ್ತು ಭಾರತದ ಧ್ಯೇಯಕ್ಕಾಗಿ ಹೆಚ್ಚಿನ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಲು ಅವರಲ್ಲಿ ತಾಳ್ಮೆ ಮತ್ತು ಶಕ್ತಿ ಹೆಚ್ಚಾಗಲಿ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಇನ್ನೂ ಹೆಚ್ಚಿನ ಜನಸೇವೆ ಮಾಡಲು ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ’ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ.
‘ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರು ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯದೊಂದಿಗೆ, ಇನ್ನೂ ಸುದೀರ್ಘಕಾಲ ದೇಶಸೇವೆ ನಡೆಸುವ ಶಕ್ತಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ನನ್ನ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ ಎಂದು ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
‘ಪ್ರಧಾನಿ ಮೋದಿ ಅವರ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆ. ಅವರ (ಮೋದಿ) ಶುಭಾಶೀರ್ವಾದ ಮತ್ತು ಸಂದೇಶವು ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ, ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ’ ಎಂದು ಹೇಳಿದ್ದಾರೆ.
‘ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ. ನನ್ನನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ಅವರು ಇರಿಸಿರುವ ನಂಬಿಕೆಗೆ ನಾನು ಋಣಿಯಾಗಿದ್ದೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.