ಬೆಂಗಳೂರು: ಕೇತಗಾನಹಳ್ಳಿಯ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಎಸ್‌ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ವಿಭಾಗೀಯ ನ್ಯಾಯಪೀಠ ತೆರವುಗೊಳಿಸಿದೆ.
ಏಕಸದಸ್ಯ ನ್ಯಾಯಪೀಠದ ಆದೇಶವನ್ನು ತೆರವುಗೊಳಿಸುವಂತೆ ಕೋರಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ರಾಮನಗರ ತಹಶೀಲ್ದಾರ್ ಸಲ್ಲಿಸಿದ ರಿಟ್ ಮೇಲ್ಮನವಿಗೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಈ ಪ್ರಕರಣದಲ್ಲಿ ಪ್ರತಿವಾದಿ ವಿರುದ್ಧ 6 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪವಿದೆ. ಒತ್ತುವರಿ ತೆರವುಗೊಳಿಸಬೇಕಿದ್ದ ಹಿನ್ನೆಲೆಯಲ್ಲಿ ರಾಮನಗರ ತಹಶೀಲ್ದಾರ್ ಮುಖಾಂತರ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಿದೆ. ಇದೇ ವೇಳೆ ಆರೋಪಗಳಿಗೆ ಸಂಬಂಧಿಸಿದಂತೆ ವಾಸ್ತವಾಂಶಗಳ ಶೋಧನೆಗಾಗಿ ಎಸ್‌ಐಟಿ ರಚಿಸಲಾಗಿದೆ. ಆದರೆ, ಪ್ರತಿವಾದಿ ಕುಮಾರಸ್ವಾಮಿ ಅವರು ಎಸ್‌ಐಟಿ ರಚನೆಯನ್ನು ಪ್ರಶ್ನಿಸಿದ್ದರು. ಈ ಪ್ರಶ್ನಿತ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠ ಎಸ್‌ಐಟಿ ರಚನೆಗೆ ಮಧ್ಯಂತರ ತಡೆ ನೀಡಿದೆ. ಈ ತಡೆ ಆದೇಶವನ್ನು ತೆರವುಗೊಳಿಸಬೇಕು’ ಎಂದು ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ಮಧ್ಯಂತರ ತಡೆ ನೀಡಿತು. ಪ್ರತಿವಾದಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ಅಂತೆಯೇ, ನವೆಂಬರ್ 26ಕ್ಕೆ ವಿಚಾರಣೆ ಮುಂದೂಡಿತು. ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ವಿ.ರೋಣ ಅವರೂ ಹಾಜರಿದ್ದರು.
ಪ್ರಕರಣವೇನು?:
‘ಎಚ್.ಡಿ.ಕುಮಾರಸ್ವಾಮಿ, ಅವರ ಸಂಬಂಧಿಯೂ ಆದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ಇತರರು ರಾಮನಗರ ತಾಲ್ಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್ ಆದೇಶಿಸಿತ್ತು.
‘ಈ ಆದೇಶವನ್ನು ಜಾರಿಗೊಳಿಸಿಲ್ಲ’ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು, ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಿ 2025ರ ಜನವರಿ 28ರಂದು ಆದೇಶಿಸಲಾಗಿತ್ತು.
ಈ ಆದೇಶವನ್ನು ಪ್ರಶ್ನಿಸಿ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿ ಎಸ್ಐಟಿ ರಚನೆ ಆದೇಶಕ್ಕೆ ತಡೆ ನೀಡಿತ್ತು.
ಎಸ್‌ಐಟಿಯು ಕರ್ನಾಟಕ ಭೂ ಕಂದಾಯ ಕಾಯ್ದೆ ಅನುಸಾರ ಯಾವುದೇ ಅಧಿಕಾರ ಚಲಾಯಿಸುತ್ತಿಲ್ಲ. ಅದು ಸಂವಿಧಾನದ 162ನೇ ವಿಧಿಯಡಿ ಪ್ರದತ್ತವಾದ ಅಧಿಕಾರದಡಿ ಕಾನೂನಿನ ಅನುಸಾರ ತನ್ನ ಕಾರ್ಯ ನಿರ್ವಹಿಸುತ್ತದೆ.ಕೆ.ಶಶಿಕಿರಣ ಶೆಟ್ಟಿ ಅಡ್ವೊಕೇಟ್ ಜನರಲ್
ಮೇಲ್ಮನವಿಯಲ್ಲಿ ಏನಿದೆ?:
‘ಕರ್ನಾಟಕ ಭೂ ಕಂದಾಯ ಕಾಯ್ದೆ–1964ರ ಕಲಂ 104ರ ಅಡಿಯಲ್ಲಿ ಶಾಸನಾತ್ಮಕ ಅಧಿಕಾರ ಚಲಾಯಿಸಿರುವ ರಾಮನಗರ ತಹಶೀಲ್ದಾರ್ ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿ ದಾಖಲೆ ಒದಗಿಸುವಂತೆ ಕೇಳಿದ್ದಾರೆ. ಈ ನೋಟಿಸ್ ಅನ್ನು ಕುಮಾರಸ್ವಾಮಿ ಏಕಸದಸ್ಯ ನ್ಯಾಯಪೀಠದಲ್ಲಿ ಪ್ರಶ್ನಿಸಿದ್ದರು. ಪ್ರಶ್ನಿಸಲಾದ ರಿಟ್ ಅರ್ಜಿಯಲ್ಲಿ ಕುಮಾರಸ್ವಾಮಿ ಹಲವು ವಾಸ್ತವಾಂಶಗಳನ್ನು ನ್ಯಾಯಾಲಯದ ಗಮನಕ್ಕೆ ತಾರದೆ ಮರೆಮಾಚಿದ್ದಾರೆ’ ಎಂದು ಮೇಲ್ಮನವಿಯಲ್ಲಿ ಆಕ್ಷೇಪಿಸಲಾಗಿದೆ. ‘ಏಕಸದಸ್ಯ ನ್ಯಾಯಪೀಠದ ಆದೇಶ ಹಲವು ಕಾನೂನಾತ್ಮಕ ಅಂಶಗಳ ದೌರ್ಬಲ್ಯದಿಂದ ಬಳಲುತ್ತಿದೆ. ಇದೊಂದು ಏಕಪಕ್ಷೀಯ ಸಕಾರಣಗಳಿಲ್ಲದ ಸರಿಯಾಗಿ ವಿಚಾರ ಮಾಡದೆ ನೀಡಲಾಗಿರುವ ಆದೇಶವಾಗಿದ್ದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ ಈ ಮಧ್ಯಂತರ ಆದೇಶವನ್ನು ವಜಾಗೊಳಿಸಬೇಕು’ ಎಂದು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.