ADVERTISEMENT

ಮೋದಿ ಸಂಪುಟಕ್ಕೆ ಎಚ್.ಡಿ. ಕುಮಾರಸ್ವಾಮಿ? ಸೇರ್ಪಡೆಯಾದರೆ ಕೃಷಿ ಖಾತೆ ಸಂಭವ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 5:06 IST
Last Updated 7 ಜನವರಿ 2024, 5:06 IST
<div class="paragraphs"><p>ಎಚ್‌.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ</p></div>

ಎಚ್‌.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ

   

(ಸಂಗ್ರಹ ಚಿತ್ರ)

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.

ADVERTISEMENT

ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಇರಾದೆ ಬಿಜೆಪಿ ವರಿಷ್ಠರದ್ದಾಗಿದೆ. ರಾಮಮಂದಿರ ಉದ್ಘಾಟನೆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಐವರು ಹೊಸದಾಗಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ, ಸಂಪುಟ ದರ್ಜೆಯ ಖಾತೆ ಖಾಲಿ ಇದೆ. ಕೃಷಿ ಖಾತೆಯ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದು, ಸಂಪುಟಕ್ಕೆ ಸೇರಿದರೆ ಅದೇ ಖಾತೆ ಸಿಗುವ ಸಂಭವ ಇದೆ ಎಂಬ ಚರ್ಚೆಯೂ ನಡೆದಿದೆ. ಕೃಷಿ ಖಾತೆ ರಾಜ್ಯ ಸಚಿವರಾಗಿ ರಾಜ್ಯದವರೇ ಆದ ಶೋಭಾ ಕರಂದ್ಲಾಜೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕುಮಾರಸ್ವಾಮಿ ಕೃಷಿ ಸಚಿವರಾದರೆ, ಶೋಭಾ ಖಾತೆ ಬದಲಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ–ಜೆಡಿಎಸ್‌ ಮೈತ್ರಿಯ ಬಗ್ಗೆ ಚರ್ಚೆ ಜೋರಾಗಿ ನಡೆದಿತ್ತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕುಮಾರಸ್ವಾಮಿ ಅವರನ್ನು ಕೂರಿಸುವ ಇಂಗಿತ ಪ್ರಧಾನಿ ಮೋದಿ ಅವರದ್ದಾಗಿತ್ತು. ‘ಎರಡು ಬಾರಿ ಮುಖ್ಯಮಂತ್ರಿ, ಒಮ್ಮೆ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ಮತ್ತೆ ವಿರೋಧ ಪಕ್ಷದ ನಾಯಕ ಸ್ಥಾನ ಬೇಡ. ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಿ’ ಎಂದು ಕುಮಾರಸ್ವಾಮಿ, ಬಿಜೆಪಿ ವರಿಷ್ಠರಿಗೆ ಹೇಳಿದ್ದರು. ಆ ಸಂದರ್ಭದಲ್ಲಿ, ಬಿಜೆಪಿ ನಾಯಕರು ಅದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.

ನಂತರದ ಬೆಳವಣಿಗೆಯಲ್ಲಿ, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರಲು ಜೆಡಿಎಸ್‌ ನಿರ್ಣಯ ಕೈಗೊಂಡಿತ್ತು. ಎಚ್‌.ಡಿ. ದೇವೇಗೌಡರು ಕುಟುಂಬ ಸಮೇತರಾಗಿ ಪ್ರಧಾನಿ ಮೋದಿ ಅವರನ್ನು ಇತ್ತೀಚೆಗೆ ಭೇಟಿಯಾಗಿದ್ದರು. ಅದಾದ ಬಳಿಕ, ಹೊಸ ರಾಜಕೀಯ ಬೆಳವಣಿಗೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಕಾರಣಕ್ಕೆ ಒಕ್ಕಲಿಗ ಮತದಾರರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳನ್ನು ಗೆದ್ದಿತ್ತು. ಈ ಕ್ಷೇತ್ರಗಳಲ್ಲಿ ಜೆಡಿಎಸ್‌–ಬಿಜೆಪಿಗೆ ಹಿನ್ನಡೆಯಾಗಿತ್ತು. ಲೋಕಸಭೆ ಕ್ಷೇತ್ರಗಳ ಪೈಕಿ, ಒಕ್ಕಲಿಗರ ಪ್ರಾಬಲ್ಯವಿರುವ ಮೈಸೂರು, ಹಾಸನ, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಉತ್ತರಗಳಲ್ಲಿ ಗೆಲ್ಲಬೇಕಾದರೆ ಜೆಡಿಎಸ್ ನೆರವು ಅಗತ್ಯ ಎಂಬ ಭಾವನೆ ಬಿಜೆಪಿ ವರಿಷ್ಠರಲ್ಲಿದೆ. ಹಾಸನ, ಮಂಡ್ಯ, ಗ್ರಾಮಾಂತರ ಬಿಟ್ಟರೆ ಉಳಿದೆಲ್ಲವೂ ಬಿಜೆಪಿ ತೆಕ್ಕೆಯಲ್ಲೇ ಇವೆ. ಅವುಗಳನ್ನು ಉಳಿಸಿಕೊಳ್ಳುವ ತಂತ್ರದ ಭಾಗವಾಗಿ, ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವರ ಪಟ್ಟ ಒಲಿಯಬಹುದು ಎಂದು ಹೇಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.