ADVERTISEMENT

ಟ್ರಾಕ್ಟರ್‌ ಇರುವ ರೈತರು ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಬೇಕೆಂಬ ಸೂಚನೆಗೆ ಆಕ್ಷೇಪ

ಸರ್ಕಾರದ ಸೂಚನೆಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 6:43 IST
Last Updated 7 ಜೂನ್ 2020, 6:43 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ಬೆಂಗಳೂರು: ಟ್ರಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ತಕ್ಷಣ ಹಿಂದಿರುಗಿಸಬೇಕೆಂಬ ಸರ್ಕಾರದ ಸೂಚನೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಟ್ರಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಇದು ಮೂರ್ಖತನದ ಸೂಚನೆ. ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ,’ ಎಂದಿದ್ದಾರೆ.

‘ರೈತರಿಗೆ ಬಿಪಿಎಲ್‌ ಕಾರ್ಡ್‌ ಹಿಂದಿರುಗಿಸಲು ಹೇಳಿರುವ ಸರ್ಕಾರ ಅದಕ್ಕೆ ಟ್ರಾಕ್ಟರ್‌, ವಾಹನಗಳನ್ನು ಮಾನದಂಡ ಮಾಡಿದೆ. ವೈಜ್ಞಾನಿಕ ಕೃಷಿ, ಟ್ರಾಕ್ಟರ್‌ ಖರೀದಿಗೆ ಪ್ರೋತ್ಸಾಹ ನೀಡುತ್ತಿರುವುದು ಸರ್ಕಾರಗಳೇ ಅಲ್ಲವೇ? ಟ್ರಾಕ್ಟರ್‌ ಖರೀದಿಸಲು ಹೇಳಿ, ಅದನ್ನೇ ಮುಂದಿಟ್ಟು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವುದು ಮೂರ್ಖತನವಲ್ಲವೇ,’ ಎಂದು ಪ್ರಶ್ನೆ ಮಾಡಿದ್ದಾರೆ.

ADVERTISEMENT

‘ಇಂದಿನ ಪೈಪೋಟಿ ಯುಗದಲ್ಲಿ ಕೃಷಿಕ ಯಂತ್ರ, ವಾಹನಗಳನ್ನು ಹೊಂದುವುದು ಅಗತ್ಯ. ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಬೇಕು. ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುವ ಬೆದರಿಕೆಯೊಡ್ಡಬಾರದು. ಬಿಪಿಎಲ್‌ ಕಾರ್ಡ್‌ ಈಗ ಕೇವಲ ಪಡಿತರಕ್ಕೆ ಮಾತ್ರ ಸೀಮಿತವಲ್ಲ. ಹಲವು ಸವಲತ್ತು, ಸೌಲಭ್ಯಗಳಿಗೆ ಬಿಪಿಎಲ್‌ ಕಾರ್ಡೇ ಆಧಾರ ಎಂಬುದು ಸರ್ಕಾರದ ಗಮನದಲ್ಲಿರಲಿ,’ ಎಂದು ಸಲಹೆ ನೀಡಿದ್ದಾರೆ.

‘ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು. ಅದಕ್ಕಾಗಿ ರೈತರ ಅನ್ನದ ತಟ್ಟೆಗೆ ಕೈ ಹಾಕಬಾರದು. ಸಾರ್ವಜನಿಕ ಪಡಿತರ ವಿತರಣೆ ವ್ಯವಸ್ಥೆಯಲ್ಲಿ ದೋಷಗಳಿವೆ. ಪಟ್ಟಭದ್ರ ಹಿತಾಸಕ್ತಿಗಳಿವೆ. ಅದನ್ನು ಮೊದಲು ಹೋಗಲಾಡಿಸಬೇಕು. ಸರ್ಕಾರ ಅದರತ್ತ ಗಮನ ಹರಿಸಲಿ. ಮಾತಿಗೆ ಮೊದಲು ರೈತರ ಕೊರಳು ಹಿಂಡುವ ತನ್ನ ಎಂದಿನ ಅಭ್ಯಾಸವನ್ನು ಸರ್ಕಾರ ತೊರೆಯಲಿ,’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸರ್ಕಾರಿ ನೌಕರರು, ಟ್ರಾಕ್ಟರ್ ಮತ್ತಿತರ ವಾಹನ ಇರುವವರುಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ತಕ್ಷಣ ಅದನ್ನು ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲದಿದ್ದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇತ್ತೀಚೆಗೆಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.