
ಎಚ್.ಡಿ. ಕುಮಾರಸ್ವಾಮಿ
ನವದೆಹಲಿ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -ಸಿಬಿಸಿ) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಬಗ್ಗೆ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಅವರು, ಮೈಸೂರಿನಲ್ಲಿ ಕೇಂದ್ರೀಯ ಸಂಪರ್ಕ ಬ್ಯೂರೋವನ್ನು ಮತ್ತಷ್ಟು ಉನ್ನತೀಕರಿಸಿ ಯಥಾಸ್ಥಿತಿಯಲ್ಲಿ ಮುಂದುವರಿಸುವುದು ಅತ್ಯಗತ್ಯವಾಗಿದೆ. ಕೇಂದ್ರ ಸರ್ಕಾರದ ಕಾರ್ಯಕ್ರಗಳನ್ನು ಪ್ರಸರಣ ಮಾಡುವಲ್ಲಿ ಈ ಬ್ಯೂರೋ ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಖ್ಯವಾಗಿ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಜನರಿಗೆ ಮಾಹಿತಿ ನೀಡುತ್ತಿದೆ. ಒಂದು ವೇಳೆ ಈ ಬ್ಯೂರೋದ ಕಚೇರಿ ಸ್ಥಗಿತವಾದರೆ ಕೇಂದ್ರ ಸರ್ಕಾರ ಹಾಗೂ ಜನರ ನಡುವಿನ ಸಂಪರ್ಕ ಸೇತುವೆ ಇಲ್ಲವಾಗುತ್ತದೆ’ ಎಂದಿದ್ದಾರೆ
ಈ ಜಿಲ್ಲೆಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬುಡಕಟ್ಟು ಸಮುದಾಯಗಳ ಜನರು ವಾಸ ಮಾಡುತ್ತಿದ್ದಾರೆ. ಜೇನು ಕುರುಬ, ಕಾಡು ಕುರುಬ, ಸೋಲಿಗ ಹಾಗೂ ಯರವ ಬುಡಕಟ್ಟು ಜನರು ಇಲ್ಲಿದ್ದಾರೆ. ಇಂತಹ ಸಮುದಾಯಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದು, ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ದೃಷ್ಟಿಯಿಂದ ಮೈಸೂರು ಕಚೇರಿಯನ್ನು ಉಳಿಸಿಕೊಳ್ಳುವುದು ಅಗತ್ಯ ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.