ADVERTISEMENT

ನಾನು ರೋಡ್‌ ಮಂತ್ರಿ, ನೀರಿನ ವಿಚಾರ ನನಗೆ ಗೊತ್ತಿಲ್ಲ: ಎಚ್‌.ಡಿ.ರೇವಣ್ಣ

​ಪ್ರಜಾವಾಣಿ ವಾರ್ತೆ
Published 29 ಜೂನ್ 2019, 12:13 IST
Last Updated 29 ಜೂನ್ 2019, 12:13 IST
   

ಮಂಡ್ಯ: ‘ನಾನು ರೋಡ್‌ ಮಂತ್ರಿ, ನೀರಿನ ವಿಚಾರ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಮಧ್ಯಂತರ ಚುನಾವಣಾ ವಿಷಯವೂ ನನಗೆ ಗೊತ್ತಿಲ್ಲ. ನಾನು ರಸ್ತೆ ಕೆಲಸದಲ್ಲಿ ತಲ್ಲೀನನಾಗಿದ್ದೇನೆ’ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಶನಿವಾರ ಹೇಳಿದರು.

‘ತಮಿಳುನಾಡಿನ ಅಧಿಕಾರಿಗಳು ರಾಜ್ಯ ಸರ್ಕಾರದ ಗಮನಕ್ಕೆ ತಾರದೇ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ನೀರಿನ ಲಭ್ಯತೆ ಕುರಿತು ಅಧ್ಯಯನ ನಡೆಸಿದ್ದಾರೆ’ ಎಂದು ತಿಳಿಸಿದರು.

‘ಬೆಳೆಗಳಿಗೆ ನೀರು ಹರಿಸುವಂತೆ ತಮಿಳುನಾಡಿನ ರೈತರು ಕೂಡ ಒತ್ತಾಯ ಮಾಡುತ್ತಿದ್ದಾರೆ. ಅಲ್ಲಿಯ ಅಧಿಕಾರಿಗಳು ರಾಜ್ಯ ಸರ್ಕಾರದ ಅನುಮತಿಯನ್ನೂ ಪಡೆಯದೇ ಜಲಾಶಯಗಳ ಪರಿಶೀಲನೆ ನಡೆಸಿದ್ದಾರೆ. ಈಗ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿರುವ ಕಾರಣ ನೀರು ಬಿಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಮಳೆ ಕೊರತೆಯಾಗಿದ್ದು ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಹೇಮಾವತಿ ಜಲಾಶಯದ ನೀರು ಕುಡಿಯಲು 15 ದಿನಗಳಿಗೆ ಮಾತ್ರ ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ADVERTISEMENT

‘ಮೈಸೂರು– ಬೆಂಗಳೂರು ದಶಪಥ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಹೆದ್ದಾರಿಯುದ್ದಕ್ಕೂ ಐದು ಬೈಪಾಸ್‌, ತಾಲ್ಲೂಕು ಕೇಂದ್ರಗಳಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.